Home ಕರಾವಳಿ ದಸರಾವರೆಗೆ ಸಾರ್ವಜನಿಕ ಸೇರುವಿಕೆ, ಹಬ್ಬ ಆಚರಣೆಗೆ ಅವಕಾಶವಿಲ್ಲ: ಡಿ.ಸಿ. ಡಾ. ರಾಜೇಂದ್ರ

ದಸರಾವರೆಗೆ ಸಾರ್ವಜನಿಕ ಸೇರುವಿಕೆ, ಹಬ್ಬ ಆಚರಣೆಗೆ ಅವಕಾಶವಿಲ್ಲ: ಡಿ.ಸಿ. ಡಾ. ರಾಜೇಂದ್ರ

ಮಂಗಳೂರು: ಕೋವಿಡ್ 3ನೆ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ.


ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಕೋವಿಡ್ 3ನೆ ಅಲೆಗೆ ಸಂಬಂಧಿಸಿ ದ.ಕ. ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು. ತುಳುನಾಡಿನ ಪ್ರಮುಖ ಆಚರಣೆಯಾದ ನಾಗರ ಪಂಚಮಿಯ ದಿನದಂದೂ ದೇವಾಲಯಗಳಲ್ಲಿ ಭಕ್ತರಿಂದ ವಿಶೇಷ ಪೂಜೆ, ಸೇವೆಗಳಿಗೆ ಅವಕಾಶವಿರುವುದಿಲ್ಲ. ಸಾಂಪ್ರದಾಯಿಕವಾಗಿ ದೇವಸ್ಥಾನಗಳ ಅರ್ಚಕರಿಂದ ನಡೆಯುವ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ. ಜಿಲ್ಲೆಯಲ್ಲಿ ನಾಗಬನ ಹಾಗೂ ಕುಟುಂಬದ ಮನೆಗಳಲ್ಲಿ ಆಚರಿಸಲಾಗುವ ಪೂಜೆಗಳನ್ನು ಕೂಡಾ ಕೋವಿಡ್ ಮಾರ್ಗಸೂಚಿಯೊಂದಿಗೆ ಯಾವುದೇ ರೀತಿಯಲ್ಲಿ ಜನ ಸಮೂಹವಾಗದಂತೆ ಜಾಗೃತಿಯೊಂದಿಗೆ ನೆರವೇರಿಸಲು ಸ್ಥಳೀಯ ಪಿಡಿಒಗಳ ಮೇಲ್ವಿಚಾರಣೆಯಲ್ಲಿ ನಡೆಸುವಂತೆ ಸೂಚಿಸಲಾಗಿದೆ ಎಂದರು.


ಸ್ವಾತಂತ್ರ್ಯ ದಿನಾಚರಣೆಯು ಕೂಡಾ ನಿಗದಿತ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಇಲ್ಲದೆ ನಡೆಸಲಾಗುತ್ತದೆ. ಕೃಷ್ಣ ಜನ್ಮಾಷ್ಠಮಿ, ಗಣೇಶ ಹಬ್ಬದ ಸಂದರ್ಭದಲ್ಲೂ ಸಾರ್ವಜನಿಕವಾಗಿ ಚಪ್ಪರ, ಶಾಮಿಯಾನ ಹಾಕಿಕೊಂಡು, ಮೆರವಣಿಗೆಯೊಂದಿಗೆ ಯಾವುದೇ ಕಾರ್ಯಕ್ರಮಕ್ಕೆ ಅವಕಾಶ ನೀಡದಿರಲು ಈಗಾಗಲೇ ಚಿಂತನೆ ಮಾಡಲಾಗಿದೆ ಎಂದು ಡಾ. ರಾಜೇಂದ್ರ ಕೆ.ವಿ. ತಿಳಿಸಿದರು. ಈ ವಾರಂತ್ಯದಲ್ಲೂ ವೀಕೆಂಡ್ ಕರ್ಫ್ಯೂ ಇರಲಿದೆ. ಪರೀಕ್ಷೆಗೆ ತೆರಳುವವರು ಇದ್ದರೆ ಹಾಲ್ ಟಿಕೆಟ್ ತೋರಿಸಿ ಪ್ರಯಾಣ ಮಾಡಬಹುದು ಎಂದು ಅವರು ತಿಳಿಸಿದ್ದಾರೆ

Join Whatsapp
Exit mobile version