ಬೆಂಗಳೂರು : ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಸಂಬಂಧ ಬಿಜೆಪಿಯಲ್ಲಿ ಬಂಡಾಯ ಎದ್ದು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಪ್ರಸ್ತುತ ನ್ಯೂಸ್‌ಗೆ ತಿಳಿದುಬಂದಿದೆ.
ಯೊಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಖಚಿತ ಎಂದು ಅವರ ಆಪ್ತ ಬಳಗ ಮತ್ತು ಕಾಂಗ್ರೆಸ್ ಮೂಲಗಳು ಹೇಳುತ್ತಿವೆ.
ಸೋಮವಾರ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿಪಿವೈ, ಬಿಜೆಪಿಯಲ್ಲಿ ಬಂಡಾಯ ಸಾರಿದ್ದು, ತಾನು ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಅವರು ಹೇಳಿದ್ದಾರೆ. ಇಂದು ಸಂಜೆ ನನ್ನ ತೀರ್ಮಾನ ತಿಳಿಸುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಯೋಗೇಶ್ವರ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಕಾಂಗ್ರೆಸ್ ಗೆಲ್ಲಲಿದೆ ಎಂದು ಕೆಲವು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಯೋಗೇಶ್ವರ್ ಸೇರ್ಪಡೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಅವರಿಗೆ ಚನ್ನಪಟ್ಟಣ ಟಿಕೆಟ್ ಆಫರ್ ಕೂಡ ನೀಡಿದೆ ಎನ್ನಲಾಗುತ್ತಿದೆ.
ಸಿಪಿವೈ ಕಾಂಗ್ರೆಸ್ ಸೇರ್ಪಡೆ ವದಂತಿ ಬಗ್ಗೆ ಮಂಗಳೂರಲ್ಲಿ ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಯಾರೇ ಪಕ್ಷಕ್ಕೆ ಸೇರ್ಪಡೆಯಾಗುವುದಿದ್ದರೂ ಸ್ವಾಗತ ಎಂದಿದ್ದಾರೆ. ಯೋಗೇಶ್ವರ್ ಕಾಂಗ್ರೆಸ್‌ನಲ್ಲಿ ಇದ್ದವರು, ಬಳಿಕ ಬಿಜೆಪಿಗೆ ಹೋದವರು, ತಮ್ಮ ಸಾಮಾರ್ಥ್ಯದಿಂದ ನಾಯಕರಾಗಿ ಬೆಳೆದಿದ್ದಾರೆ, ಅವರು ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಮಾಡುವುದಾಗಿ ತಿಳಿಸಿದರು. ಆದರೆ ಟಿಕೆಟ್ ವಿಚಾರದಲ್ಲಿ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸೂತ್ರದ ಪ್ರಕಾರ ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ಜೆಡಿಎಸ್‌ಗೆ ನೀಡಬೇಕು ಎನ್ನುವ ನಿರ್ಧಾರವನ್ನು ಉಭಯ ಪಕ್ಷದ ನಾಯಕರು ಮಾಡಿದ್ದಾರೆ. ಇದರಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಯೋಗೇಶ್ವರ್ ಬಂಡಾಯ ಎದ್ದಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಸಿ.ಪಿ ಯೋಗೇಶ್ವರ್ ಈಗಾಗಲೇ ಘೋಷಿಸಿದ್ದಾರೆ.