ಜೈಪುರ್: ರಾಜಸ್ಥಾನದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಎಂಬವರನ್ನು ಕತ್ತು ಕೊಯ್ದು ಹತ್ಯೆ ನಡೆದ ಬೆನ್ನಲ್ಲೇ ಉದಯಪುರ ಜಿಲ್ಲೆಯಲ್ಲಿ 144 ಸೆಕ್ಷನ್ ಅಡಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ ಎಂಬ ಕಾರಣಕ್ಕೆ ಟೈಲರ್ ಅನ್ನು ಹತ್ಯೆ ಮಾಡಿದ ಇಬ್ಬರು ಆರೋಪಿಗಳಾದ ಮೊಹಮ್ಮದ್ ರಿಯಾಜ್ ಅನ್ಸಾರಿ ಮತ್ತು ಗೌಸ್ ಮೊಹಮ್ಮದ್ ಅನ್ಸಾರಿ ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.
ಉದಯಪುರದ ಧನ್ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯನ್ನು ಗಮನದಲ್ಲಿಟ್ಟುಕೊಂಡು, ಉದಯಪುರ ಜಿಲ್ಲೆಯ ಧನ್ಮಂಡಿ, ಘಂಟಾಘರ್, ಹಾಥಿಪೋಲ್, ಅಂಬಾಮಾತಾ, ಸೂರಜ್‌ಪೋಲ್, ಭೂಪಾಲಪುರ ಮತ್ತು ಸವಿನಾ ಪಿಎಸ್ ಪ್ರದೇಶಗಳಲ್ಲಿ ಸೆಕ್ಷನ್ 144 ಮತ್ತು ಕರ್ಫ್ಯೂ ವಿಧಿಸಲಾಗಿದೆ. ಈ ಜಿಲ್ಲೆಯಲ್ಲಿ ಮುಂದಿನ ಆದೇಶದವರೆಗೆ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದು ತಿಳಿದು ಬಂದಿದೆ.
ಈ ಹತ್ಯೆಯನ್ನು ಖಂಡಿಸಿ ಜನರು ಪ್ರತಿಭಟನೆ ನಡೆಸುತ್ತಿದ್ದು, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮುಂದಿನ 24 ಗಂಟೆಗಳವರೆಗೆ ಇಂಟರ್ ಸೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.