ಸೋಮವಾರಪೇಟೆ: ವ್ಯಕ್ತಿಯೊಬ್ಬ ದಲಿತ ವಿದ್ಯಾರ್ಥಿನಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಗರಗಂದೂರು ಬಿ. (ಹೊಸತೋಟ) ಗ್ರಾಮದಲ್ಲಿ ನಡೆದಿದೆ. 10 ನೇ ತರಗತಿ ವಿದ್ಯಾರ್ಥಿನಿ ರಸ್ತೆ ಬದಿಯಲ್ಲಿ ತಿಂಡಿ ಖರೀದಿಸಲು ಹೋದ ಸಂದರ್ಭ ಕಾರ್ಮಿಕನೊಬ್ಬ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ. ಇದರ ಪರಿಣಾಮ ಕುತ್ತಿಗೆಯ ಬಲ ಭಾಗಕ್ಕೆ ಹಾಗೂ ಕೈಗಳಿಗೆ ಗಾಯಗಳಾಗಿದ್ದು ವಿದ್ಯಾರ್ಥಿನಿಯನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲ್ಲೆ ನಡೆಸಿದ ಆರೋಪಿಯನ್ನು ಶೀಘ್ರವೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಜಿಲ್ಲಾ ಘಟಕ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ. ಆರೋಪಿಯನ್ನು ಠಾಣೆಗೆ ಕರೆಯಿಸಿ ತಕ್ಷಣ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಭಾವಿಗಳ ಒತ್ತಡಕ್ಕೆ ಮಣಿದಿರುವ ಬಗ್ಗೆ ಸಂಶಯ ವ್ಯಕ್ತವಾಗುತ್ತಿದೆ ಎಂದು ಪಕ್ಷ ಆರೋಪಿಸಿದೆ. ಹಲ್ಲೆ ನಡೆಸಿದಾತನನ್ನು ಮತ್ತೆ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಪಿಐಎಂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹೆಚ್.ಪಿ.ರಮೇಶ್ ಆಗ್ರಹಿಸಿದ್ದಾರೆ.
ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ಎ.ಮಹದೇವು ಮಾತನಾಡಿ ವಿದ್ಯಾರ್ಥಿನಿಯ ಕುತ್ತಿಗೆಗೆ ಗಾಯವಾಗಿದ್ದರೂ ಸೂಕ್ತ ಚಿಕಿತ್ಸೆ ನೀಡದೆ ಬಲವಂತವಾಗಿ ಡಿಸ್ಚಾರ್ಜ್ ಮಾಡಲಾಗಿದೆ. ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.