ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಎಸ್ ಸಿಎಸ್‌ಪಿ/ಟಿಎಸ್ ಪಿ) ಕಾಯ್ದೆಯನ್ನು ಜಾರಿಗೆ ತಂದು, ದಲಿತರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡಿ, ಅದರ ನಂತರ ನಮ್ಮ ದಲಿತ ಕಾಳಜಿಯನ್ನು ಪ್ರಶ್ನಿಸಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಕಳೆದ ಹತ್ತು ವರ್ಷಗಳಿಂದ ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದರೂ ಒಪ್ಪಿಕೊಳ್ಳದ ನರೇಂದ್ರ ಮೋದಿಯವರು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಕಣ್ಣೀರು ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ.
ಪ್ರಸಕ್ತ ಸಾಲಿನ ನಮ್ಮ ಸರ್ಕಾರದ ಬಜೆಟ್ ಗಾತ್ರ ರೂ.3.71,383 ಕೋಟಿ ರೂ, ಅದರಲ್ಲಿ ರೂ.39,121 ಕೋಟಿಯನ್ನು ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಗೆ ಮೀಸಲಿಟ್ಟಿದ್ದೇವೆ. ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ರೂ.48.21 ಲಕ್ಷ ಕೋಟಿಯಾಗಿದ್ದು, ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ನೀಡಿರುವ ಅನುದಾನ ರೂ.2,90,401 ಕೋಟಿ ರೂ. ಮಾತ್ರ. ಪ್ರಧಾನಿ ಮೋದಿ ಅವರೇ, ಇದು ನಿಮ್ಮ ಸರ್ಕಾರದ ದಲಿತ ಕಾಳಜಿ ಎಂದು ತಿಳಿಸಿದ್ದಾರೆ.