ಆಫ್ರಿಕನ್ ಪ್ರಜೆ ಸಾವು: ಬೆಂಗಳೂರಿನಲ್ಲಿ ಆಫ್ರಿಕನ್ ಪ್ರಜೆಗಳಿಂದ ಪ್ರತಿಭಟನೆ| ಪೊಲೀಸರ ಮೇಲೆ ಹಲ್ಲೆ, ಲಾಠಿ ಚಾರ್ಚ್!

Prasthutha|

ಬೆಂಗಳೂರು, ಆ, 2: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜೆ.ಸಿ.ನಗರ ಪೊಲೀಸರ ವಶದಲ್ಲಿದ್ದ ವಿದೇಶಿ ಪ್ರಜೆಯೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ವಿದೇಶಿ ಪ್ರಜೆ ಸಾವನ್ನಪ್ಪಿದ್ದಾನೆ.

- Advertisement -

ಆಫ್ರಿಕಾ ಪ್ರಜೆ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಪೊಲೀಸರು ದಾಳಿ ನಡೆಸಿದ್ದರು. ಆತನ ಬಳಿ 5 ಗ್ರಾಂ ಎಂಡಿಎಂಎ ಪತ್ತೆಯಾಗಿತ್ತು. ಹೀಗಾಗಿ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ವೇಳೆ ಎದೆನೋವು ಮತ್ತು ಶೀತ ಇದೆ ಎಂದು ಆಫ್ರಿಕಾ ಪ್ರಜೆ ಪೊಲೀಸರಿಗೆ ತಿಳಿಸಿದ್ದ. ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ ಪೊಲೀಸರು ಚಿಕಿತ್ಸೆ ಕೊಡಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಶಕ್ಕೆ ಪಡೆದುಕೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಆತನ ಗುರುತು ಈವರೆಗೂ ಪತ್ತೆಯಾಗಿಲ್ಲ. ಸಾವಿಗೆ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ನಂತರವಷ್ಟೇ ತಿಳಿದು ಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಆಫ್ರಿಕನ್ ಪ್ರಜೆಗಳು ಪ್ರತಿಭಟನೆ ನಡೆಸಿ, ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಲಾಠಿಚಾರ್ಚ್ ಮೂಲಕ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.

Join Whatsapp