ನವದೆಹಲಿ: ಹಿಂದೂ ದೇವತೆಗಳಿಗೆ ಅಪಮಾನ, ದೇಶ ವಿರೋಧಿ ಭಾವನೆ ಹರಡುವುದು ಮತ್ತು ಧಾರ್ಮಿಕ ವಿಚಾರಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಪೋಸ್ಟ್ ಗಳನ್ನು ಪ್ರಕಟಿಸಿದ ಆರೋಪದ ಮೇಲೆ ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಪ್ರಕರಣ ದಾಖಲಿಸುವಂತೆ ದೆಹಲಿ ಪೊಲೀಸರಿಗೆ ಸ್ಥಳೀಯ ನ್ಯಾಯಾಲಯ ನಿರ್ದೇಶನ ನೀಡಿದೆ.
ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಖ್ಯ ಮ್ಯಾಜಿಸ್ಟ್ರೇಟ್ (ಸಿಜೆಎಂ) ಹಿಮಾಂಶು ರಮಣ್ ಸಿಂಗ್ ಅವರು ಅಯ್ಯೂಬ್ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯದ ನಿರ್ದೇಶನ ಕೋರಿ ವಕೀಲರೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ್ದಾರೆ.
ಪ್ರಕರಣ ಸಂಬಂಧ ಅಯ್ಯೂಬ್ ವಿರುದ್ಧ ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಜನ್ಮಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಪ್ರಚೋದಿಸುವಿಕೆ), 295 ಎ (ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು), 505ರ (ಸಾರ್ವಜನಿಕವಾಗಿ ಕಿಡಿಗೇಡಿತನದ ಹೇಳಿಕೆಗಳನ್ನು ನೀಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಯುತವಾಗಿ ತನಿಖೆ ನಡೆಸುವಂತೆ ಪೊಲೀಸರಿಗೆ ರಮಣ್ ಸಿಂಗ್ ಅವರು ಸೂಚಿಸಿದ್ದಾರೆ.
ದೂರುದಾರರು ಪ್ರಸ್ತಾಪಿಸಿರುವ ವಿಚಾರಗಳನ್ನು ಆಧರಿಸಿ ಅಯ್ಯೂಬ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮತ್ತು ನ್ಯಾಯಯುತವಾಗಿ ತನಿಖೆ ನಡೆಸುವಂತೆ ದಕ್ಷಿಣ ದೆಹಲಿಯ ಸೈಬರ್ ಪೊಲೀಸ್ ಠಾಣೆಯ ಎಸ್ಎಚ್ಒಗೆ ನ್ಯಾಯಾಧೀಶರು ಸೂಚಿಸಿದ್ದಾರೆ.