Home ಕರಾವಳಿ ಪ್ಲಾಸ್ಟಿಕ್ ದುಷ್ಪರಿಣಾಮದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

ಪ್ಲಾಸ್ಟಿಕ್ ದುಷ್ಪರಿಣಾಮದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ 2016ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆ ಹಾಗೂ 2021ರಲ್ಲಿ ಕೇಂದ್ರ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಸಂಬಂಧಿಸಿದ ಅಧಿಕಾರಿಗಳು ಚಾಚೂ ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ನಿರ್ದೇಶನ ನೀಡಿದರು.

ಅವರು ಜುಲೈ 25ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಈ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು 2016ರಂತೆ ಪ್ಲಾಸ್ಟಿಕ್ ಧ್ವಜಗಳು, ಕ್ಯಾಂಡಿಸ್ಟಿಕ್ ಗಳು, ಐಸ್ ಕ್ರೀಮ್ ಸ್ಟಿಕ್ ಗಳು, ಪ್ಲೇಟ್, ಕಪ್, ಚಮಚ, ಫೋರ್ಕ್, ಟ್ರೇಗಳು, ಸ್ವೀಟ್ ಬಾಕ್ಸ್, ಸಿಗರೇಟ್ ಪ್ಯಾಕ್ ಇತ್ಯಾದಿಗಳನ್ನು ಅವುಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಹಾಗೂ ಬಳಕೆಯನ್ನು 2022ರ ಜುಲೈ 1 ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದವರು ತಿಳಿಸಿದರು.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಾಗೂ ನಿಷೇಧಿತ ವಸ್ತುಗಳು ಕಂಡುಬಂದರೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ಮಾತನಾಡಿದರು.

ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಪರಿಸರ ಇಲಾಖೆ ಅಧಿಕಾರಿ ಕೀರ್ತಿ ಕುಮಾರ್, ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು, ಮಾರಾಟಗಾರರಾದ ಸಂದೀಪ್ ಶೆಣೈ, ವಚನ್ ಶೆಟ್ಟಿ ಹಾಗೂ ಇತರರು ಸಭೆಯಲ್ಲಿದ್ದರು.

Join Whatsapp
Exit mobile version