ಮಂಗಳೂರು: ಸುರತ್ಕಲ್ ಟೋಲ್ ಗೇಟ್ ತೆರವಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಅಂತಿಮ ಪ್ರಕ್ರಿಯೆಗಳು ನಡೆಯುತ್ತಿದ್ದು, ಸರ್ಕಾರವು ಅಧಿಕೃತವಾಗಿ ಗೆಜೆಟ್ ನೋಟಿಫಿಕೇಷನ್ ಹೊರಡಿಸುವವರೆಗೂ ಧರಣಿಯನ್ನು ಮುಂದೂಡುವಂತೆ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿಯ ಸದಸ್ಯರಿಗೆ ಸಲಹೆ ನೀಡಿದರು.
ಅವರು ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಈ ಕುರಿತಂತೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗೆಜೆಟ್ ನೋಟಿಫಿಕೇಷನ್ ಹೊರಡಿಸುವವರೆಗೂ ಟೋಲ್ ಗೇಟ್ ತೆರವು ಸಮಿತಿಯವರು ತಾಳ್ಮೆ ವಹಿಸಬೇಕು, ಆ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ, ಈ ಸಂದರ್ಭದಲ್ಲಿ ಸಮಿತಿಯವರು ಟೋಲ್ ಗೇಟ್ ಇರುವ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಯಾವುದೇ ಕ್ರಮಗಳನ್ನು ಕೈಗೊಳ್ಳಬಾರದು, ತಪ್ಪಿದಲ್ಲಿ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ, ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸಲು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಅನುಮತಿ ನೀಡಿದ್ದು, ಗೆಜೆಟ್ ನೋಟಿಫಿಕೇಷನ್ ಬಾಕಿ ಉಳಿದಿದೆ, ನೋಟಿಫಿಕೇಷನ್ ಆಗುವ ದಿನಾಂಕವನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ, ಆದ ಕಾರಣ ಟೋಲ್ ಗೇಟ್ ಹೋರಾಟ ಸಮಿತಿಯವರು ಯಾವುದೇ ರೀತಿಯ ಧರಣಿಗಳನ್ನು ಕೈಗೊಳ್ಳದಂತೆ ಕೋರಿದರು.
ಮಂಗಳೂರು ನಗರದ ಪೊಲೀಸ್ ಆಯುಕ್ತ ಶಶಿಕುಮಾರ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅನ್ಶು ಕುಮಾರ್, ಸಹಾಯಕ ಆಯುಕ್ತರಾದ ಮದನ್ ಮೋಹನ್, ಗಿರೀಶ್ ನಂದನ್, ಟೋಲ್ ಗೇಟ್ ಹೋರಾಟ ಸಮಿತಿಯ ಕಾನೂನು ಸಲಹೆಗಾರರಾದ ದಿನೇಶ್ ಹೆಗ್ಡೆ ಉಳೆಪಾಡಿ, ಇಂತಿಯಾಝ್, ಅಝೀಝ್ ಹಾಗೂ ಇತರೆ ಸದಸ್ಯರು ಉಪಸ್ಥಿತರಿದ್ದರು.