ಪಠ್ಯ ಪರಿಷ್ಕರಣೆ ವಿವಾದ: ಸಚಿವ ನಾಗೇಶ್’ಗೆ ಮತ್ತೆ ಪತ್ರ ಬರೆದು ನಿಮ್ಮ ಧೋರಣೆ, ದಬ್ಬಾಳಿಕೆ ಎಂದ ದೇವನೂರು ಮಹಾದೇವ

Prasthutha|

ಬೆಂಗಳೂರು: ಪಠ್ಯ ಪರಿಷ್ಕರಣೆಯ ಕುರಿತು ಸಿಡಿದೆದ್ದಿರುವ ಸಾಹಿತಿಗಳು ತಮ್ಮ ಪಠ್ಯವನ್ನು ಕೈ ಬಿಡುವಂತೆ ಸರಕಾರವನ್ನು ಆಗ್ರಹಿಸಿದ್ದರು. ಸರಕಾರದದ ವಿರುದ್ಧ ಕಿಡಿಕಾರಿದ್ದ ಹಿರಿಯ ಸಾಹಿತಿ ದೇವನೂರು ಮಹಾದೇವ ಪಠ್ಯವನ್ನು ತೆಗೆದು ಹಾಕುವಂತೆ ಶಿಕ್ಷಣ ಸಚಿವ ಬಿಸಿ ನಾಗೇಶ್’ಗೆ ಪತ್ರವನ್ನು ಬರೆದಿದ್ದರು. ಇದೀಗ ಇಂದು ಮತ್ತೊಮ್ಮೆ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಮಹಾದೇವ, ನಿಮ್ಮ ಧೋರಣೆ ದಬ್ಬಾಳಿಕೆ ಅನ್ನಿಸಿಬಿಟ್ಟಿತು ಎಂದು ಹೇಳಿದ್ದಾರೆ.

- Advertisement -

ಪತ್ರದ ಸಾರಾಂಶ:
ಈ ಹಿಂದೆ , ಹತ್ತನೇ ತರಗತಿಯ ಪಠ್ಯ ಪುಸ್ತಕದಲ್ಲಿರುವ ನನ್ನ ಪಠ್ಯವನ್ನು ಕೈ ಬಿಡಬೇಕೆಂದು ತಮಗೆ ವಿನಂತಿಸಿ ದಿನಾಂಕ 26.05.2022 ರಂದು ಪತ್ರ ಬರೆದು ಕೊರಿಯರ್ ಮುಖಾಂತರ ರವಾನಿಸಿದ್ದೆ . ಅದನ್ನು ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೂ , ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ರವರಿಗೂ ಬರೆದು ಕೊರಿಯರ್ ಮಾಡಿದ್ದೆ . ಆ ಪತ್ರದಲ್ಲಿ ನಾನು ಒಪ್ಪಿಗೆ ಇಲ್ಲದಿರುವುದಕ್ಕೆ ಸ್ಪಷ್ಟನೆ ನೀಡಿದ್ದೇನೆ . ಹೀಗಿದ್ದೂ ನನ್ನ ಮನವಿಯನ್ನು ತಾವು ಪರಿಗಣಿಸದೆ , ಇತ್ತೀಚಿನ ತಮ್ಮ ಹೇಳಿಕೆಯಲ್ಲಿ “ ಪರಿಷ್ಕೃತ ಮುದ್ರಣವೇ ಜಾರಿಗೆ ಬರುತ್ತದೆ ” ಎಂದಿದ್ದೀರಿ . ಕ್ಷಮಿಸಿ , ನಿಮ್ಮ ಈ ಧೋರಣೆ ನನಗೆ ದಬ್ಬಾಳಿಕೆ ಅನ್ನಿಸಿಬಿಟ್ಟಿತು.

- Advertisement -

ಮತ್ತೂ ಹೇಳಬೇಕೆಂದರೆ , ಚತುರ್ಣ ವಿರೋಧಿ ಬಸವಣ್ಣನವರ ಪಾಠವನ್ನು ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಕತ್ತು ಹಿಚುಕಿರುವುದು , ಕುವೆಂಪು , ಅಂಬೇಡ್ಕರ್ ಅವರನ್ನು ಗೇಲಿ ಮಾಡುವ ಮನಸ್ಥಿತಿಯ ವ್ಯಕ್ತಿಯನ್ನೇ ಪಠ್ಯಪುಸ್ತಕ ಪರಿಷ್ಕರಣೆಗೆ ಅಧ್ಯಕ್ಷನನ್ನಾಗಿಸಿರುವುದು ಹಾಗೂ ಒಂದು ಒಕ್ಕೂಟ ಸರ್ಕಾರದಲ್ಲಿ ಆ ಒಕ್ಕೂಟದ ಅಂಗವಾಗಿರುವ ಕರ್ನಾಟಕ ರಾಜ್ಯವು ತನಗೂ ಒಂದು ಧ್ವಜವೂ ಬೇಕು ಎಂದು ದನಿ ಎತ್ತಿದ ಸಂದರ್ಭದಲ್ಲಿ ಆ ಪರಿಕಲ್ಪನೆಯನ್ನು ತನ್ನ ಲಂಗೋಟಿಗೆ ಹೋಲಿಕೆ ಮಾಡಿದ ಹೀನ ಅಭಿರುಚಿಯ ವ್ಯಕ್ತಿಯನ್ನು ಮಕ್ಕಳ ಪಠ್ಯ ಪರಿಷ್ಕರಣೆ ಮಾಡಲು ಅಧ್ಯಕ್ಷನನ್ನಾಗಿಸಿರುವುದು ಮತ್ತು ಸಮರ್ಥಿಸುತ್ತಿರುವುದು , ಭಿನ್ನಾಭಿಪ್ರಾಯಗಳನ್ನು ಟೂಲ್‌ಕಿಟ್‌ ಎಂದು ರಾಜಕೀಯಗೊಳಿಸಿ ಪರಾರಿಯಾಗಲು ನೋಡುವುದು ಇವೆಲ್ಲ ಹಾಗೂ ನಾಡಿನ ಗಣ್ಯರು , ಮಠಾಧಿಪತಿಗಳು , ಲೇಖಕರು , ಪ್ರಜ್ಞಾವಂತರು ತಮ್ಮ ನೋವನ್ನು ವ್ಯಕ್ತಪಡಿಸಿ ಹಿಂದಿನ ಪಠ್ಯಮಸ್ತಕವನ್ನೇ ಮುಂದುವರಿಸಿ ಎಂದು ಕೇಳಿಕೊಂಡರೂ ತಾವು ಅದನ್ನು ಕಾಲುಕಸ ಮಾಡಿ ಲೆಕ್ಕಿಸದಿರುವುದನ್ನು ನೋಡಿದಾಗ ಇದು ನಾಡಿಗೆ ಕೇಡಿನ ಲಕ್ಷಣಗಳು ಎಂದೆನ್ನಿಸುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Join Whatsapp