ಮಂಗಳೂರು: ಫರಂಗಿಪೇಟೆಯ ಪಿ.ಯು ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವನ್ನು ಮುಂದಿಟ್ಟುಕೊಂಡು ಶಾಸಕ ಡಾ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜಾ, ಬಜರಂಗದಳ ಕಾರ್ಯಕರ್ತ ಭರತ್ ಕುಮ್ಡೇಲು ಕೋಮುದ್ವೇಷ ಹರಡಲು ಯತ್ನಿಸಿದ್ದಾರೆ ಎಂದು ಡಿವೈಎಫ್ಐ, ಎಸ್ಎಫ್ಐ ಹಾಗೂ ಜನವಾದಿ ಮಹಿಳಾ ಸಂಘಟನೆಗಳು ಆರೋಪಿಸಿವೆ.
ಈ ಮೂವರ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಕೊಳ್ಳಬೇಕು ಎಂದು ಒತ್ತಾಯಿಸಿ ಈ ಸಂಘಟನೆಗಳ ಕಾರ್ಯಕರ್ತರು ಮಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
‘ಕೋಮು ಸೂಕ್ಷ್ಮ ಪ್ರದೇಶದಲ್ಲಿ ದ್ವೇಷ ಭಾಷಣ ಮಾಡಿರುವ ಶಾಸಕ ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ ವಿರುದ್ಧ ಇನ್ನೂ ಪ್ರಕರಣ ದಾಖಲಿಸಿಲ್ಲವೇಕೆ ಎಂದು ಗೃಹಸಚಿವ ಜಿ.ಪರಮೇಶ್ವರ ಉತ್ತರಿಸಬೇಕು. ಕೋಮು ದ್ವೇಷ ಹುಟ್ಟಿಸುವವರ ವಿರುದ್ಧ ಪ್ರಕರಣ ದಾಖಲಿಸುವ ಭರವಸೆ ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಪಕ್ಷವು ನೀಡಿದ್ದ ಭರವಸೆ ಏನಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
‘ಕುತ್ತಾರಿನಲ್ಲಿ ಕೊರಗಜ್ಜನ ಆದಿಸ್ಥಳದಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧವೂ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದರು.