ಮಹಿಳಾ ಪ್ರಯಾಣಿಕರಿಂದ ದೂರುಗಳು ಬಂದರೆ ಶಿಸ್ತು ಕ್ರಮ: ಸುತ್ತೋಲೆ ಹೊರಡಿಸಿದ ಸಾರಿಗೆ ಇಲಾಖೆ

Prasthutha|

ಬೆಂಗಳೂರು: ಮಹಿಳಾ ಪ್ರಯಾಣಿಕರಿಗೆ ಉಚಿತವಾಗಿ ಪ್ರಯಾಣಿಸುವ ಬಗ್ಗೆ ಅಪಹಾಸ್ಯ ಮಾಡುವುದು, ಇನ್ನಿತರೆ ರೀತಿಯಲ್ಲಿ ಮಹಿಳೆಯರೊಂದಿಗೆ ಅಗೌರವದಿಂದ ನಡೆದುಕೊಳ್ಳುತ್ತಿರುವ ಬಗ್ಗೆ ದೂರುಗಳು ಬಂದಲ್ಲಿ ಅಂತಹ ಬಸ್ ನಿರ್ವಾಹಕ ಅಥವಾ ಚಾಲಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಸುತ್ತೋಲೆ ಹೊರಡಿಸಿದೆ.

- Advertisement -

ಕರ್ನಾಟಕ ಸರ್ಕಾರವು ರಾಜ್ಯದ ಸಮಸ್ತ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವಾದ ಶಕ್ತಿ ಯೋಜನೆಯನ್ನು ಜೂನ್ 11ರಿಂದ ಜಾರಿಗೆ ತಂದಿದೆ. ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಚಾಲನಾ ಸಿಬ್ಬಂದಿಗಳ ಪರಿಶ್ರಮವು ಹೆಚ್ಚಿನ ಮಟ್ಟದಲ್ಲಿರುತ್ತದೆ. ಆದರೆ ಕೆಲವೊಂದು ಅಹಿತಕರ ಘಟನೆಗಳು ಈ ಮಹತ್ವದ ಯೋಜನೆಯ ಬಗ್ಗೆ ಭಿನ್ನಾಭಿಪ್ರಾಯಗಳು ಮೂಡುವಂತೆ ಮಾಡುತ್ತಿದೆ ಎಂದು ಇಲಾಖೆಯು ಅಸಮಾಧಾನ ಹೊರಹಾಕಿದೆ.

ಚಾಲನಾ ಸಿಬ್ಬಂದಿಗಳು ನಿಗಮದ ಸಾರಿಗೆಗಳಲ್ಲಿ ಪ್ರಯಾಣಿಸುವ ಮಹಿಳಾ ಪುಯಾಣಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸುವುದು ಹಾಗೂ ಈ ಬಗ್ಗೆ ಮಹಿಳಾ ಪ್ರಯಾಣಿಕರಿಂದ ಯಾವುದೇ ದೂರುಗಳಿಗೆ ಅವಕಾಶ ನೀಡದಂತೆ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದ್ದು, ತಪ್ಪಿದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

- Advertisement -

ಅದಾಗ್ಯೂ, ಮಹಿಳೆಯರು ಇರುವ ಬಸ್‌ ನಿಲ್ದಾಣ ಅಥವಾ ಬಸ್ ನಿಲುಗಡೆ ಸ್ಥಳಗಳಲ್ಲಿ ಬಸ್‌ ನಿಲ್ಲಿಸದೇ ಇರುವುದು ಅಥವಾ ಮಹಿಳಾ ಪ್ರಯಾಣಿಕರಿಗೆ ಉಚಿತವಾಗಿ ಪ್ರಯಾಣಿಸುವ ಬಗ್ಗೆ ಅಪಹಾಸ್ಯ ಮಾಡುವುದು, ಇನ್ನಿತರೆ ರೀತಿಯಲ್ಲಿ ಮಹಿಳೆಯರೊಂದಿಗೆ ಅಗೌರವದಿಂದ ನಡೆದುಕೊಳ್ಳುತ್ತಿರುವ ಪ್ರಕರಣಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವರದಿಗಳು ಪ್ರಸಾರವಾಗುತ್ತಿರುವುದನ್ನು ಸಾರಿಗೆ ಹಾಗೂ ಮುಜರಾಯಿ ಸಚಿವರು ಗಂಭೀರವಾಗಿ ಪರಿಗಣಿಸಿದ್ದಾರೆ.

ಮಹಿಳೆಯರಿಗೆ ವಿತರಿಸುವ ಟಿಕೆಟ್ ಮೊತ್ತವನ್ನು ಸಾರಿಗೆ ಆದಾಯವೆಂದು ಪರಿಗಣಿಸಲಾಗುತ್ತಿರುವ ಹಿನ್ನೆಲೆಯಲ್ಲಿ ನಿಗಮದ ಚಾಲಕ ಮತ್ತು ನಿರ್ವಾಹಕರುಗಳು ನಿಗದಿತ ಎಲ್ಲಾ ಬಸ್ ನಿಲ್ದಾಣ ಅಥವಾ ಬಸ್ ನಿಲುಗಡೆ ಸ್ಥಳಗಳಲ್ಲಿ ನಿಲುಗಡೆ ನೀಡಿ ಪ್ರಯಾಣಿಕರನ್ನು ವಿಶೇಷವಾಗಿ ಮಹಿಳೆಯರು ಮತ್ತು ವಿದ್ಯಾರ್ಥಿಗಳನ್ನು ಹತ್ತಿಸಿ ಇಳಿಸಬೇಕು. ಪ್ರಯಾಣಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು ಎಂದು ಇಲಾಖೆಯು ತಿಳಿಸಿದೆ.

ಇನ್ನು ಮುಂದೆ, ಮಹಿಳಾ ಪ್ರಯಾಣಿಕರೊಂದಿಗೆ ಯಾವುದೇ ರೀತಿಯಲ್ಲಿ ಅಗೌರವದಿಂದ ನಡೆದುಕೊಳ್ಳುವ ಪ್ರಕರಣಗಳು ವರದಿಯಾದಲ್ಲಿ ಸಂಬಂಧಪಟ್ಟ, ಚಾಲಕ ಮತ್ತು ನಿರ್ವಾಹಕರ ಮೇಲೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವುದು. ಚಾಲನಾ ಸಿಬ್ಬಂದಿಗಳು ಶಕ್ತಿ ಯೋಜನೆಯ ಪರಿಣಾಮಕಾರಿ ಯಶಸ್ವಿ ಅನುಷ್ಠಾನಕ್ಕೆ ಸಹಕರಿಸುವ ಆಶಯವನ್ನು ನಿಗಮವು ಹೊಂದಿದೆ. ಈ ಸುತ್ತೋಲೆಯಲ್ಲಿರುವ ಅಂಶಗಳ ಬಗ್ಗೆ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಅಗತ್ಯ ತಿಳುವಳಿಕೆಯನ್ನು ನೀಡುವಂತೆ ಅಧಿಕಾರಿಗಳಿಗೆ ಇಲಾಖೆ ತಿಳಿಸಿದೆ.