ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸಲು ಸಂಬಂಧಿಸಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಅಗತ್ಯ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ.ವಿ ಅವರು ತಿಳಿಸಿದರು.
ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲೆಯ ಗ್ರಾಮ ಪಂಚಾಯತ್‍ಗಳ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕು ಆರೋಗ್ಯಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೊತೆವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು.
ಜಿಲ್ಲೆಯ ಗಡಿ ದಾಟುವ ಪ್ರತಿಯೊಬ್ಬರಲ್ಲಿಯೂ ಕೋವಿಡ್ ನೆಗೆಟಿವ್ ವರದಿ ಇರಬೇಕು. ಗಡಿಭಾಗದಿಂದ ಜಿಲ್ಲೆಗೆ ಪ್ರತಿನಿತ್ಯ ಕೆಲಸ ಕಾರ್ಯಗಳಿಗಾಗಿ ಆಗಮಿಸುವವರಿಗೆ 7 ದಿನಕ್ಕೊಮ್ಮೆ ಕಡ್ಡಾಯವಾಗಿ ಲ್ಯಾಬ್ ಟೆಕ್ನಿಷಿಯನ್‍ಗಳು ಕೋವಿಡ್ ತಪಾಸಣೆ ನಡೆಸಬೇಕು. ಕೋವಿಡ್ ಸೋಂಕು ನಿಯಂತ್ರಿಸುವಲ್ಲಿ ಕೈಗೊಳ್ಳಬಹುದಾದ ಕಾರ್ಯಗಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರುಗಳಿಗೆ ಮತ್ತು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ, ಅದರಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.
ಕೋವಿಡ್ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‍ಗಳಿಗೆ ದಾಖಲಿಸಬೇಕು, ಸೋಂಕಿತರು ಅನಗತ್ಯವಾಗಿ ಓಡಾಡುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಎಫ್‍ಐಆರ್ ದಾಖಲಿಸಬೇಕು, ಒಂದೇ ಕುಟುಂಬದಲ್ಲಿ 2 ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬಂದಲ್ಲಿ ಅಂತಹ ಮನೆಯನ್ನು ಮೈಕ್ರೋ ಕಂಟೈನ್‍ಮೆಂಟ್ ಜೋನ್ ಎಂದು ಪರಿಗಣಿಸಬೇಕು ಎಂದರು.
ಸಾಮಾನ್ಯ ರೋಗ ಲಕ್ಷಣಗಳಿರುವವವರು ಎಂ.ಬಿ.ಬಿ.ಎಸ್. ವೈದ್ಯರು ಹಾಗೂ ಮೆಡಿಕಲ್ ಶಾಪ್‍ಗಳಿಗೆ ನೇರವಾಗಿ ಹೋಗಿ ಔಷಧಿಗಳನ್ನು ಪಡೆಯುತ್ತಿರುವುದು ಕಂಡುಬರುತ್ತಿದ್ದು, ಇದರ ಬಗ್ಗೆ ಎಂ.ಬಿ.ಬಿ.ಎಸ್. ವೈದ್ಯರು ಹಾಗೂ ಔಷಧ ಅಂಗಡಿಯವರು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.
ಜಿಲ್ಲೆಯ ಪ್ರತಿಷ್ಠಿತ ದೇವಸ್ಥಾನಗಳಾದ ಕಟೀಲು ಶ್ರೀ ದುರ್ಗಾ ಪರಮೇಶ್ವರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರ ರಾಜ್ಯದಿಂದ ಹಾಗೂ ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ಕೇವಲ ದರ್ಶನಕ್ಕೆ ಮಾತ್ರ ಅವಕಾಶವಿರುತ್ತದೆ. ಆದರೆ ವಾರಾಂತ್ಯದಲ್ಲಿ ಭಕ್ತರ ಪ್ರವೇಶ ಸಂಪೂರ್ಣವಾಗಿ ನಿರ್ಭಂಧಿಸಲಾಗಿದೆ, ಯಾವುದೇ ಸೇವೆಗಳನ್ನು ಕೈಗೊಳ್ಳದಂತೆ ಹಾಗೂ ಸಾರ್ವಜನಿಕರು ವಸತಿಗೃಹಗಳಲ್ಲಿ ತಂಗಲು ಅವಕಾಶವಿರುವುದಿಲ್ಲ ಎಂದರು.
ಮದುವೆ ಕಾರ್ಯಕ್ರಮಗಳಿಗೆ ಕೇವಲ 50 ಜನರು ಮಾತ್ರ ಸೀಮಿತಗೊಳಿಸಲಾಗಿದೆ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದಲ್ಲಿ ಕಲ್ಯಾಣ ಮಂಟಪಗಳ ಮಾಲೀಕರ ವಿರುದ್ಧ ಎಫ್.ಐ.ಆರ್. ದಾಖಲಿಸುವಂತೆ ತಿಳಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲ್ಯಾಬ್ ಟೆಕ್ನಿಷಿಯನ್‍ಗಳ ಅಗತ್ಯವಿದ್ದಲ್ಲಿ ಶೀಘ್ರವಾಗಿ ನಿಯೋಜನೆ ಮಾಡಿಕೊಳ್ಳಬಹುದು ಹಾಗೂ ಅವರಿಂದ ಹೆಚ್ಚಿನ ಕೋವಿಡ್ ಪರೀಕ್ಷೆಗಳನ್ನು ಮಾಡಿಸಬೇಕು ಎಂದು ತಿಳಿಸಿದರು.
ವಿಡಿಯೋ ಸಂವಾದದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಜಿಲ್ಲೆಯ ಗ್ರಾಮ ಪಂಚಾಯತ್‍ಗಳ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಇತರರು ಭಾಗವಹಿಸಿದ್ದರು.