ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆಯ ಜಾರಿಗೂ ಇದೀಗ ಆದೇಶ ಹೊರಬಿದ್ದಿದೆ.
ಗೃಹ ಜ್ಯೋತಿ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಟ 200 ಯೂನಿಟ್ ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್ ಗಳ ಮೇಲೆ ಶೇ.10ರಷ್ಟು ಹೆಚ್ಚಿನ ಬಳಕೆಯ ಮಿತಿಯನ್ನು ಹಾಕಲಾಗಿದೆ. ಶೇ.10ರ ಮಿತಿಯನ್ನು ದಾಟಿದರೆ ಎಷ್ಟು ಯೂನಿಟ್ ಖರ್ಚಾಗುತ್ತದೋ ಅಷ್ಟು ಯುನಿಟ್ ಗೆ ಮಾತ್ರ ಬಿಲ್ ಪಾವತಿಸಬೇಕಾಗುತ್ತದೆ. 200 ಯೂನಿಟ್ ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಬೇಕಾಗುತ್ತದೆ.
ಈ ಯೋಜನೆಯನ್ನು ಜುಲೈ 2023ರ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ 2023ರ ತಿಂಗಳಿಂದ ನೀಡುವ ಬಿಲ್ ಗೆ ಅನ್ವಯವಾಗುವಂತೆ ಜಾರಿಯಾಗಿದೆ.
ಷರತ್ತುಗಳೇನು?
- ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ, ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ
- ಪ್ರತಿ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸುವುದು.
- ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ ನೆಟ್ ಬಿಲ್ ನೀಡುವುದು ಹಾಗೂ ಗ್ರಾಹಕರು ನೆಟ್ ಬಿಲ್ ಪಾವತಿಸುವುದು
- ಅರ್ಹ ಯೂನಿಟ್ / ಮೊತ್ತಕ್ಕಿಂತ ಒಳಗೆ, ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು.
- ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
- ಪ್ರತಿ ಫಲಾನುಭವಿಯು ತನ್ನ Customer ID / Account ID ಅನ್ನು ಆಧಾರ್ಗೆ ಕಡ್ಡಾಯವಾಗಿ ಜೋಡಣೆ ಮಾಡುವುದು
- ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ – ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿ ಗ್ರಾಹಕರುಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸುವುದು.
- ಜೂನ್ 30ರ ಒಳಗಡೆ ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದ್ದು, ಬಾಕಿ ಮೊತ್ತವನ್ನು ನಿಗದಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ.
- ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು. ಗ್ರಾಹಕನಿಗೆ ನೀಡಿದ ಉಚಿತ ಮೊತ್ತವನ್ನು ಸರ್ಕಾರದಿಂದ ವಿದ್ಯತ್ ಸರಬರಾಜು ಕಂಪನಿಗಳಿಗೆ ಸಹಾಯಧನದ ಮೂಲಕ ಪಾವತಿಸಲಾಗುತ್ತದೆ.