Home ಟಾಪ್ ಸುದ್ದಿಗಳು ಸಮಾಜದ ಸಾಮರಸ್ಯವನ್ನು ಹಾಳು ಮಾಡುವ ಬಿಜೆಪಿಗೆ ಮನುಷ್ಯತ್ವ ಇದೆಯೇ: ಸಿದ್ದರಾಮಯ್ಯ ಪ್ರಶ್ನೆ

ಸಮಾಜದ ಸಾಮರಸ್ಯವನ್ನು ಹಾಳು ಮಾಡುವ ಬಿಜೆಪಿಗೆ ಮನುಷ್ಯತ್ವ ಇದೆಯೇ: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ನಗರದಲ್ಲಿ ಇಂದು ಪತ್ರಿಕಾಗೋಷ್ಟಿಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಮಾಜದ ಸಾಮರಸ್ಯವನ್ನು ಹಾಳು ಮಾಡುವ ಬಿಜೆಪಿಗೆ ಮನುಷ್ಯತ್ವ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಜನಸಾಮಾನ್ಯರು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಅದನ್ನು ಮುಚ್ಚಿಹಾಕಲು ಸರ್ಕಾರಗಳು ಕೋಮು ಗಲಭೆಗೆ ಪ್ರಚೋದಿಸುತ್ತಿವೆ. ಹಿಜಾಬ್ ಪದ್ಧತಿ, ಹಿಂದೂಯೇತರರ ವ್ಯಾಪಾರಕ್ಕೆ ನಿರ್ಬಂಧ, ಕಾಶ್ಮೀರ್ ಫೈಲ್ಸ್ ಸಿನಿಮಾಗಳ ಬಗ್ಗೆ ಮಾತನಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯುಗಾದಿ ಹಬ್ಬಕ್ಕೆ ಕೇಂದ್ರ ಸರಕಾರ ಸಿಹಿ ಕೊಡದೆ ಕಹಿ ನೀಡಿದೆ. ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿದ್ದ ಪ್ರಧಾನಿ, ರೈತರ ರಕ್ತ ಹೀರುತ್ತಿದ್ದಾರೆ ಎಂದರು. ತೈಲ ಕಂಪನಿಗಳು ನಮ್ಮ ಅಧೀನದಲ್ಲಿಲ್ಲ ಎನ್ನುತ್ತಾರೆ. ಆದರೆ ಚುನಾವಣೆ ಸಮಯದಲ್ಲಿ ತೈಲ ಬೆಲೆ ಇಳಿಕೆಗೊಂಡು ಚುನಾವಣೆ ಮುಗಿಯುತ್ತಿದ್ದಂತೆ ಬೆಲೆ ಹೆಚ್ಚಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಹಲಾಲ್ ವಿವಾದದ ಕುರಿತಾಗಿ ಪ್ರತಿಕ್ರಿಯಿಸಿದ ಸಿದ್ದು, ಸಾವಿರಾರು ವರ್ಷಗಳಿಂದ ಹಲಾಲ್ ಇದೆ. ಅವರ ಪದ್ಧತಿ ಅವರದ್ದು, ನಮ್ಮ ಪದ್ಧತಿ ನಮ್ಮದು. ರಕ್ತದಿಂದ ಕೂಡಿರುವ ಮಾಂಸ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ಅವರ ನಂಬಿಕೆ. ಅವರ ನಂಬಿಕೆಯಂತೆ ಅವರು ಬದುಕಲು ಬಿಡಿ. ನಾವೂ ಕೂಡ ಹಲಾಲ್ ಕಟ್ ಮಾಂಸ ಖರೀದಿಸಿ ತಿಂದಿಲ್ವಾ? ನಾವು ಜಾತ್ರೆಗಳಲ್ಲಿ ಮರಿ ಕಡಿಯುವುದಿಲ್ಲವಾ? ಅನಗತ್ಯ ವಿಚಾರಕ್ಕೆ ಶಾಂತಿ ಹಾಳು ಮಾಡುವ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಡೀಸೆಲ್ ಮೇಲಿನ ಸುಂಕ ಶೇ 531, ಪೆಟ್ರೋಲ್ ಮೇಲೆ ಸುಂಕ ಶೇ 203ರಷ್ಟು ಹೆಚ್ಚಾಗಿದೆ. ಆದರೆ ಕಾರ್ಪೊರೇಟ್ ಟ್ಯಾಕ್ಸ್ ಶೇ 35ರಿಂದ 23ಕ್ಕೆ ಇಳಿಕೆಯಾಗಿದೆ. ನಿರ್ಮಲಾ ಸೀತರಾಮನ್ ಹಿಂದಿನ ಸರಕಾರದ ಬಗ್ಗೆ ದೂರುತ್ತಿದ್ದಾರೆ. ದೇಶದ ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನರೇಂದ್ರ ಮೋದಿ ಸಬ್ಸಿಡಿಯನ್ನೂ ನಿಲ್ಲಿಸಿಬಿಟ್ಟಿದ್ದಾರೆ ಎಂದು ಹೇಳಿದ್ದಾರೆ.

Join Whatsapp
Exit mobile version