ಯಲಹಂಕ: ಮಾಜಿ ಸಚಿವ ಡಾ. ಕೆ. ಸುಧಾಕರ್‌ಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಿರುವ ಕ್ರಮವನ್ನು ವಿರೋಧಿಸಿ ಬಿಹೆಪಿಗರಿಂದನೇ ‘ಗೋ ಬ್ಯಾಕ್ ಸುಧಾಕರ್’ ಅಭಿಯಾನ ಆರಂಭವಾಗಿದೆ. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಬೆಂಬಲಿಗರು, ಕೆಂಪೇಗೌಡ ವೃತ್ತದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಕೆಂಪೇಗೌಡ ಪ್ರತಿಮೆಯ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಸುಧಾಕರ್ ವಿರುದ್ಧ ಘೋಷಣೆ ಕೂಗಿದ್ದಾರೆ. ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸಾಮಗ್ರಿಗಳ ಖರೀದಿಯಲ್ಲಿ ಸುಧಾಕರ್ ಭ್ರಷ್ಟಾಚಾರ ಮಾಡಿದ್ದಾರೆ ಎಂದು ರೋಗಿಗಳ ಶವ ಸಂಸ್ಕಾರದ ಅಣುಕು ಪ್ರದರ್ಶಿಸಿದ್ದಾರೆ.
ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಸತೀಶ್ ಕಡತನಮಲೆ ಈ ಸಂದರದರ್ಭ ಮಾತಾಡಿ, ಮುಖಂಡರು ಹಾಗೂ ಕಾರ್ಯಕರ್ತರ ಕಷ್ಟ ಕೇಳದ ಮತ್ತು ಮತದಾರರಿಗೆ ಕಿಂಚಿತ್ತೂ ಸ್ಪಂದಿಸದ ಸುಧಾಕರ್‌ಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಿರುವುದು ಸರಿಯಲ್ಲ. ಜನಸಾಮಾನ್ಯರ ಬಳಿಗೆ ತೆರಳಿ ಮತ ಕೇಳಲು ಮುಜುಗರ ಉಂಟಾಗುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಇಂತಹ ವ್ಯಕ್ತಿಗೆ ಟಿಕೆಟ್ ನೀಡಿರುವುದರಿಂದ ಕಾರ್ಯಕರ್ತರು ಹಾಗೂ ಮುಖಂಡರು ತೀವ್ರ ಅಸಮಾಧಾನಗೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.