Home ಜಾಲತಾಣದಿಂದ ನಮ್ಮ ಕ್ಲಿನಿಕ್ ಯೋಜನೆಗೆ ಚಾಲನೆ; ಜನವರಿ ಅಂತ್ಯದೊಳಗೆ 438 ನಮ್ಮ ಕ್ಲಿನಿಕ್ ಆರಂಭ: ಸಿಎಂ ಬೊಮ್ಮಾಯಿ

ನಮ್ಮ ಕ್ಲಿನಿಕ್ ಯೋಜನೆಗೆ ಚಾಲನೆ; ಜನವರಿ ಅಂತ್ಯದೊಳಗೆ 438 ನಮ್ಮ ಕ್ಲಿನಿಕ್ ಆರಂಭ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಬಡವರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ತಲುಪಿಸಲು ಸರ್ಕಾರ  ಆದ್ಯತೆ ನೀಡಿದ್ದು, ಜನವರಿ ಅಂತ್ಯದೊಳಗೆ 438  ನಮ್ಮ ಕ್ಲಿನಿಕ್ ಆರಂಭಿಸಲಾಗುವುದು  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಿಗ್ಗೆ ‌ಹುಬ್ಬಳ್ಳಿ ತಾಲೂಕಿನ ಬೈರಿದೇವರಕೋಪ್ಪದ ರೇಣುಕಾ ನಗರದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಸರಕಾರ ಹೆಚ್ಚು ಆದ್ಯತೆ ನೀಡಿದೆ. ಆರೋಗ್ಯ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ 10 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ. ಬಡವರಿಗೆ, ಜನಸಾಮಾನ್ಯರಿಗೆ ಅತ್ಯಂತ ಅವಶ್ಯಕತೆ ಇರುವ ಈ ಆರೋಗ್ಯ ಕಾರ್ಯಕ್ರಮ ನಗರದಲ್ಲಿನ ಬಡವರ ಆರೋಗ್ಯ ದೃಷ್ಟಿಯಿಂದ ಮಹತ್ವದ್ದಾಗಿದೆ. ಬಡವರಿಗೆ ಆರೋಗ್ಯ ಸಮಸ್ಯೆ ಉಂಟಾದರೆ ಖಾಸಗಿ ಆಸ್ಪತ್ರೆಗಳು ಹೆಚ್ಚು ದರ ವಿಧಿಸುವುದರಿಂದ ತೊಂದರೆ ಆಗುತ್ತದೆ. ನಮ್ಮ ಸರಕಾರ ಸ್ಪಂದನಾಶೀಲವಾಗಿದೆ ಎಂದು ತಿಳಿಸಿದರು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಹೊಸ ವರ್ಷದ ಜನವರಿ ಅಂತ್ಯಕ್ಕೆ ಎಲ್ಲಾ 438 ʼನಮ್ಮ ಕ್ಲಿನಿಕ್ʼಗಳು ಕಾರ್ಯಾರಂಭವಾಗಲಿವೆ. ಹಾಗೆಯೇ ಮಹಿಳೆಯರಿಗೆ ಮೀಸಲಾದ ʼಆಯುಷ್ಮತಿʼ ಕ್ಲಿನಿಕ್’ಗಳನ್ನೂ ಜನವರಿಯಲ್ಲೇ ಉದ್ಘಾಟಿಸಲಾಗುವುದು ಎಂದು ಹೇಳಿದರು.

  ನಮ್ಮ ಕ್ಲಿನಿಕ್’ನಲ್ಲಿ ಲ್ಯಾಬ್ ಪರೀಕ್ಷೆ, ತಪಾಸಣೆ, ಔಷಧಿ ಸಂಪೂರ್ಣ ಉಚಿತವಾಗಿದ್ದು, ಇದು ಆರೋಗ್ಯ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ತರುವ ಹೆಜ್ಜೆಯಾಗಿದೆ. ಸದ್ಯ 114 ಕ್ಲಿನಿಕ್’ಗಳನ್ನು ಉದ್ಘಾಟಿಸಲಾಗುತ್ತಿದೆ. ಇನ್ನು ಮುಂದೆ ಪ್ರತಿ ವಾರಕ್ಕೆ 100 ರಂತೆ ಕ್ಲಿನಿಕ್’ಗಳನ್ನು ಉದ್ಘಾಟನೆ ಮಾಡಿ, ಜನವರಿ ಅಂತ್ಯಕ್ಕೆ ಎಲ್ಲಾ 438 ಕ್ಲಿನಿಕ್’ಗಳನ್ನು ಆರಂಭಿಸಲಾಗುವುದು. ಹಾಗೆಯೇ, ಆಯುಷ್ಮತಿ ಕ್ಲಿನಿಕ್ ಕೂಡ ಆರಂಭವಾಗಲಿದೆ. ಇದು ಮಹಿಳೆಯರಿಗೆ ನಮ್ಮ ಸರ್ಕಾರ ನೀಡುತ್ತಿರುವ ಹೊಸ ವರ್ಷದ ಕೊಡುಗೆ ಎಂದು ತಿಳಿಸಿದರು.

ರಾಜ್ಯದಲ್ಲಿ 7 ಸಾವಿರಕ್ಕೂ ಅಧಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಈಗಾಗಲೇ ಆರಂಭಿಸಿದ್ದು, ಇಲ್ಲಿ 30 ವರ್ಷ ವಯಸ್ಸು ಮೇಲ್ಪಟ್ಟ ಎಲ್ಲರೂ ವರ್ಷಕ್ಕೆ ಒಮ್ಮೆ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಭಾರತ ಈಗ ಮಧುಮೇಹದ ಕೇಂದ್ರವಾಗಿದ್ದು, ಇಂತಹ ಅಸಾಂಕ್ರಾಮಿಕ ರೋಗಗಳ ಪತ್ತೆ ಅಗತ್ಯವಿದೆ. ಇದಕ್ಕಾಗಿ ಕಳೆದ ಒಂದು ವರ್ಷದಲ್ಲಿ ಈ ಕೇಂದ್ರಗಳಲ್ಲಿ ಶೇ.60 ರಷ್ಟು ಜನರನ್ನು ತಪಾಸಣೆ ಮಾಡಿದ್ದು, ವಿವಿಧ ರೋಗಗಳಿಗೆ ಉಚಿತ ಔಷಧಿ ನೀಡಲಾಗುತ್ತಿದೆ. ಜನವರಿ ತಿಂಗಳಿಂದ ಮಧುಮೇಹ, ಬಿಪಿ, ಕ್ಷಯ ಮೊದಲಾದ ರೋಗಗಳಿಗೆ ಔಷಧಿಯನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಒಂದು ಕ್ಲಿನಿಕ್’ನಲ್ಲಿ ಒಬ್ಬ ವೈದ್ಯ, ಲ್ಯಾಬ್ ತಂತ್ರಜ್ಞ, ನರ್ಸ್, ಡಿ ಗ್ರೂಪ್ ನೌಕರ ಇರುತ್ತಾರೆ. ಜ್ವರ, ಕೆಮ್ಮು, ನೆಗಡಿ ಮೊದಲಾದ ಸಣ್ಣ ಸಮಸ್ಯೆಗಳಿಗೆ ಹಿಂದೆ ಜಿಲ್ಲಾಸ್ಪತ್ರೆಗೆ ಹೋಗಬೇಕಿತ್ತು. ಆದರೆ ಈಗ ನಮ್ಮ ಕ್ಲಿನಿಕ್ಗೆ ಹೋಗಿ ಉಚಿತವಾಗಿ ಸೇವೆ ಪಡೆಯಬಹುದು. ಬೇರೆ ಆಸ್ಪತ್ರೆಗಳಲ್ಲಿ 10 ರೂ. ಶುಲ್ಕ ಪಡೆಯಲಾಗುತ್ತಿತ್ತು. ಆದರೆ ನಮ್ಮ ಕ್ಲಿನಿಕ್’ನಲ್ಲಿ ಬಿಡಿಗಾಸನ್ನೂ ನೀಡಬೇಕಿಲ್ಲ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಹಾಲಪ್ಪ ಆಚಾರ್, ಸಿ.ಸಿ.ಪಾಟೀಲ್ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ್ ಹಾಗೂ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Join Whatsapp
Exit mobile version