ಬೆಂಗಳೂರು: ರಾಜ್ಯದಲ್ಲಿ ರೈತರ ಆತ್ಮಹತ್ಯೆ ಹೆಚ್ಚುತ್ತಿರುವ ಬಗ್ಗೆ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ತೀವ್ರ ಕಳವಳ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಎಕ್ಸ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀಕ್ಷ್ಣವಾಗಿ ಹರಿಹಾಯ್ದಿರುವ ಅವರು, ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ. ಕೃಷಿ ಇಲಾಖೆ ಎನ್ನುವುದು ಇದೆಯಾ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ ಎಂದು ಪ್ರಶ್ನಿಸಿದ್ದಾರೆ. ಕಳೆದ ಆರು ತಿಂಗಳಲ್ಲಿ 251 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಪತ್ರಿಕಾ ವರದಿಯೊಂದರ ತುಣುಕನ್ನು ಉಲ್ಲೇಖಿಸಿ ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
‘ಬೆಳ್ಳಂ ಬೆಳಗ್ಗೆಯೇ ಈ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು. ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ’ ಎಂದು ಎಕ್ಸ್ ಪೋಸ್ಟ್ನಲ್ಲಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.