ಇ.ಡಿ, ಐಟಿ ದುರ್ಬಳಕೆ ಆರೋಪ; ಪ್ರಧಾನಿ ಪ್ರತಿಕೃತಿ ದಹಿಸಿ ಕಾಂಗ್ರೆಸ್ ಪ್ರತಿಭಟನೆ

Prasthutha|

ಹಾಸನ: ಬಿಜೆಪಿಯವರು ಇಡಿ, ಐಟಿ ದುರ್ಬಳಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಯೂತ್ ಕಾಂಗ್ರೆಸ್ ಮುಖಂಡರು, ಪ್ರತಿಭಟನೆ ನಡೆಸಿ ಪ್ರಧಾನಿ ಮೋದಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ಹೊರ ಹಾಕಿದರು.

- Advertisement -

ಕೇಂದ್ರ ಸರ್ಕಾರ ಇಡಿ, ಐಟಿ ದುರ್ಬಳಕೆ ಮಾಡಿಕೊಂಡು ತನಿಖೆ ನೆಪದಲ್ಲಿ ನಮ್ಮ ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ ಹಾಗೂ ರಾಹುಲ್‌ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಕಿಡಿ ಕಾರಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಹೇಮಾವತಿ ಪ್ರತಿಮೆಯವರೆಗೂ ಪಂಜಿನ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಬಿಜೆಪಿ ಸರ್ಕಾರ ಹಾಗೂ ನರೇಂದ್ರಮೋದಿ ವಿರುದ್ಧ ಘೋಷಣೆ ಕೂಗಿದರು.

- Advertisement -

ನಂತರ ಹೇಮಾವತಿ ಪ್ರತಿಮೆ ಎದುರು ನರೇಂದ್ರಮೋದಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜಕೀಯ ವೈಷಮ್ಯದಿಂದ ರಾಹುಲ್ ಗಾಂಧಿ ಹಾಗೂ ಸೋನಿಯಾಗಾಂಧಿ ವಿರುದ್ಧ ತನಿಖೆ ನಡೆಸುತ್ತಿದ್ದಾರೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಬಂಧಿಸಿ ಹಲ್ಲೆ ಸಹ ಮಾಡಿದ್ದಾರೆ. ಕೇಂದ್ರ ಸರ್ಕಾರದ ಈ ಧೋರಣೆ ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕಾಂಗ್ರೆಸ್ ನಾಯಕರಿಗೆ ಮಾನಸಿಕ ಕಿರುಕುಳ ಮತ್ತು ಹಲ್ಲೆ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಂಜಿತ್ ಗೊರೂರು, ಕಾಂಗ್ರೆಸ್ ಮುಖಂಡರಾದ ಬನವಾಸೆ ರಂಗಸ್ವಾಮಿ, ದೇವರಾಜೇಗೌಡ, ಸಮದ್, ತಾರಾ ಚಂದನ್, ಹುಡಾ ಮಾಜಿ ಅಧ್ಯಕ್ಷ ಕೃಷ್ಣಕುಮಾರ್ ಇತರರು ಉಪಸ್ಥಿತರಿದ್ದರು.

Join Whatsapp