ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಬರುವಂತೆ ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿ, ವಿಚಾರಣೆ ನಡೆಸುತ್ತಿದೆ.
2012ರಲ್ಲಿ ಯಂಗ್ ಇಂಡಿಯನ್ ಲಿಮಿಟೆಡ್ ನಿಂದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಅನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಕೆಲವು ಕಾಂಗ್ರೆಸ್ ನಾಯಕರು ವಂಚನೆವೆಸಗಿದ್ದಾರೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದರು. ಮಾತ್ರವಲ್ಲ ಈ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಜವಾಹರಲಾಲ್ ನೆಹರು ಅವರು ಸ್ಥಾಪಿಸಿದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಆಸ್ತಿಯನ್ನು ವೈಐಎಲ್ ಸ್ವಾಧೀನಪಡಿಸಿಕೊಂಡಿದೆ ಎಂದು ಅವರು ಆರೋಪಿಸಿದ್ದರು.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್, ಪತ್ರಕರ್ತೆ ಸುಮನ್ ದುಬೆ ಮತ್ತು ತಂತ್ರಜ್ಞ ಸ್ಯಾಮ್ ಪಿತ್ರೋಡಾ ಅವರ ಹೆಸರು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇಳಿಬಂದಿತ್ತು.
ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಪುತ್ರ ರಾಹುಲ್ ಗಾಂಧಿ, ಪ್ರಕರಣದ ಇತರ ಆರೋಪಿಗಳು ಪ್ರತಿಕ್ರಿಯಿಸುವಂತೆ ಫೆಬ್ರವರಿಯಲ್ಲಿ ದೆಹಲಿ ಹೈಕೋರ್ಟ್ ಸೂಚಿಸಿತ್ತು.
ನ್ಯಾಯಮೂರ್ತಿ ಸುರೇಶ್ ಕೈಟ್ ಅವರನ್ನೊಳಗೊಂಡ ಏಕಸದಸ್ಯ ಪೀಠ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಮಾಜಿ ಕಾರ್ಯದರ್ಶಿ ಆಸ್ಕರ್ ಫೆರ್ನಾಂಡಿಸ್, ಸುಮನ್ ದುಭೆ, ಸ್ಯಾಮ್ ಪಿತ್ರೋಡಾ ಮತ್ತು ಯಂಗ್ ಇಂಡಿಯಾ ಲಿಮಿಟೆಡ್ ಎಂಬವರು ಸುಬ್ರಮಣಿಯನ್ ಸ್ವಾಮಿ ಆರೋಪದ ಕುರಿತು ಏಪ್ರಿಲ್ 12 ರೊಳಗೆ ತಮ್ಮ ನಿಲುವನ್ನು ಪ್ರಕಟಿಸುವಂತೆ ಆದೇಶಿಸಿತ್ತು.