►ಸಂಪೂರ್ಣ ಕಾಂಗ್ರೆಸ್ ಪಕ್ಷ ಖರ್ಗೆ ಜೊತೆಯಿದೆ ಎಂದ ಜೈರಾಮ್ ರಮೇಶ್
ಬೆಂಗಳೂರು: ತೆರಿಗೆ ವಂಚನೆ ಆರೋಪದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ವಕ್ತಾರ ರಾಹುಲ್ ಗಾಂಧಿಯನ್ನು ಇ ಡಿ ಈಗಾಗಲೇ ವಿಚಾರಣೆಗೆ ಒಳಪಡಿಸಿದೆ. ಇದೀಗ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಜ್ಯಸಭೆಯ ವಿಪಕ್ಷ ನಾಯಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಇಡಿ ಸಮನ್ಸ್ ನೀಡಿದೆ.
ಈ ಕುರಿತು ತೀವ್ರ ವಿರೋಧ ವ್ಯಕ್ತಪಡಿಸಿರುವ ಮೇಲ್ಮನೆ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್, ಸಂಸದೀಯ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಅತ್ಯಂತ ಕೆಟ್ಟ ಪರಂಪರೆಗೆ ಬಿಜೆಪಿ ನಾಂದಿ ಹಾಡಿದೆ. ಅಧಿವೇಶನದ ವೇಳೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಡಿ ಸಮನ್ಸ್ ನೀಡಿರುವುದು ಮೋದಿ ಸರ್ಕಾರದ ರಣಹೇಡಿತನಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಅಧಿವೇಶನದಲ್ಲಿ ಬೆಲೆ ಏರಿಕೆ, ಅವೈಜ್ಞಾನಿಕ GST,ಜನ ವಿರೋಧಿ ನೀತಿಗಳನ್ನ ಎದುರಿಸಲು 56 ಇಂಚಿನ ಎದೆಗೆ ಧೈರ್ಯವಿಲ್ಲ. ಆದುದರಿಂದ ಈ ರೀತಿಯ ತಂತ್ರ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಖರ್ಗೆ ಸಮನ್ಸ್ ಬಗ್ಗೆ ವಿಮರ್ಶಿಸಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಖರ್ಗೆ ಅವರನ್ನು ಜಾರಿ ನಿರ್ದೇಶನಾಲಯ ಗುರುವಾರ ಸುದೀರ್ಘ ವಿಚಾರಣೆ ನಡೆಸುತ್ತಿದೆ. ಕಾಂಗ್ರೆಸ್ ವಕ್ತಾರರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಈಗಾಗಲೇ ವಿಚಾರಣೆಗೆ ಒಳಪಡಿಸಿರುವ ಇ ಡಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನ್ನ ಮುಂದೆ ಹಾಜರಾಗುವಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಮನ್ಸ್ ನೀಡಿದೆ. ಖರ್ಗೆ ಅವರನ್ನು ಕಳೆದ ನಾಲ್ಕೂವರೆ ಗಂಟೆಗಳಿಂದ ಇಡಿ ವಿಚಾರಣೆ ನಡೆಸುತ್ತಿದೆ. ಆದರೆ ಸಂಪೂರ್ಣ ಕಾಂಗ್ರೆಸ್ ಪಕ್ಷ ಅವರ ಜತೆ ಒಗ್ಗಟ್ಟಿನಿಂದ ನಿಂತಿದೆ ಎಂದು ಟ್ವೀಟ್ ಮಾಡಿದ್ದಾರೆ.