ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿ ಬಹುಕೋಟಿ ಅಕ್ರಮ ನಡೆದಿದೆಯೆಂದು ಆರೋಪಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 21ರಂದು ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಜಾರಿ ನಿರ್ದೇಶನಾಲಯ (ED) ನೋಟಿಸ್ ಜಾರಿ ಮಾಡಿದೆ. ಇದು ಎರಡನೆಯ ಸಮನ್ಸ್ ಆಗಿದೆ.
ಅಬಕಾರಿ ನೀತಿ ಜಾರಿಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಬಹುಕೋಟಿ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಏಪ್ರಿಲ್ ತಿಂಗಳಲ್ಲಿ ಅರವಿಂದ್ ಕೇಜ್ರಿವಾಲ್ರನ್ನು ಈ ಹಿಂದೆ ಸಿಬಿಐ ವಿಚಾರಣೆಗೆ ಒಳಪಡಿಸಿತ್ತು. ಆಗ 9.5 ಘಂಟೆಗಳ ಕಾಲ ವಿಚಾರಣೆ ಎದುರಿಸಿದ್ದ ಕೇಜ್ರಿವಾಲ್ 56 ಪ್ರಶ್ನೆಗಳಿಗೆ ಉತ್ತರಿಸಿದ್ದಾಗಿ ತಿಳಿಸಿದ್ದರು.
ನವೆಂಬರ್ 02ರಂದು ವಿಚಾರಣೆಗೆ ಹಾಜರಾಗುವಂತೆ ED ನೋಟಿಸ್ ಜಾರಿ ಮಾಡಿತ್ತು. ಆದರೆ, ಇದು ರಾಜಕೀಯ ಪ್ರೇರಿತ ಎಂದು ಆರೋಪಿಸಿ ಅರವಿಂದ್ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿರಲಿಲ್ಲ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತನಿಖಾಧಿಕಾರಿಗಳ ಮುಂದೆ ತಮ್ಮ ಹೇಳಿಕೆ ದಾಖಲಿಸಲು ಕೇಜ್ರಿವಾಲ್ಗೆ ಸಮನ್ಸ್ ನೀಡಲಾಗಿದೆ. ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಎರಡನೇ ಬಾರಿಗೆ ನೋಟಿಸ್ ಜಾರಿ ಮಾಡಿದೆ