ಬೆಂಗಳೂರು: ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಹಿಂದೇಟು ಹಾಕಿದೆ.
ಈ ಹಿಂದೆ ಮಾಡಿರುವ ಆದೇಶದ ಪ್ರಕಾರ ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಜೂನ್ ಹಾಗೂ ಜುಲೈ ತಿಂಗಳ ಅಂತ್ಯದಲ್ಲಿ ಪರಿಹಾರ ಬೋಧನೆ ಮಾಡಿ ಎರಡು ಪೂರಕ ಪರೀಕ್ಷೆಗಳನ್ನು ಶಾಲಾ ಹಂತದಲ್ಲಿಯೇ ನಡೆಸಲಾಗುವುದು. ಜತೆಗೆ ವಿದ್ಯಾರ್ಥಿಗಳ ಕಲಿಕಾ ಬಲವರ್ಧನೆಗೊಳಿಸಬೇಕು ಎಂದು ಸೂಚಿಸಲಾಗಿತ್ತು.
ಆದರೆ ಸದ್ಯ ಪರೀಕ್ಷೆ ಬದಲಾಗಿ ಶಾಲಾ ಹಂತದಲ್ಲಿಯೇ ಪರಿಹಾರ ಬೋಧನೆ ಕೈಗೊಳ್ಳುವಂತೆ ತಿದ್ದುಪಡಿ ಮಾಡಲಾಗಿದೆ. ಶಾಲಾ ಹಂತದಲ್ಲಿಯೇ ಪರಿಹಾರ ಬೋಧನೆ ಪ್ರಕ್ರಿಯೆಯನ್ನು ಜೂನ್ ಮತ್ತು ಜುಲೈ ತಿಂಗಳಲ್ಲಿ ಕೈಗೊಂಡು ಕಲಿಕಾ ಸಾಮರ್ಥ್ಯವನ್ನು ಉತ್ತಮಪಡಿಸುವಂತೆ ಸೂಚಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ತಿಳಿಸಿದೆ.