ತಿರುವನಂತಪುರ: ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಮಾಜಿ ಕೇಂದ್ರ ಸಚಿವ ಕೆ.ವಿ.ಥಾಮಸ್ ಅವರನ್ನು ಗುರುವಾರ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಕೆ.ಸುಧಾಕರನ್, ಎಐಸಿಸಿ ಒಪ್ಪಿಗೆ ಮೇರೆಗೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಸದ್ಯಕ್ಕೆ ಸುಧಾಕರನ್ ರಾಜಸ್ಥಾನದ ಜೈಪುರದಲ್ಲಿದ್ದು ಕಾಂಗ್ರೆಸ್ ಪಕ್ಷದ ಚಿಂತನ್ ಶಿವರ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿಂದಲೇ ಕೆ.ವಿ.ಥಾಮಸ್ ಅವರನ್ನು ಉಚ್ಛಾಟನೆಗೊಳಿಸುವ ಆದೇಶ ಹೊರಡಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಪಿಐ(ಎಂ) ನಾಯಕ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ವೇದಿಕೆ ಹಂಚಿಕೊಂಡ ಕೆಲವೇ ಗಂಟೆಗಳ ನಂತರ ಕಾಂಗ್ರೆಸ್ ಥಾಮಸ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.