ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಅರ್ಜಿದಾರರ ಮನವಿಯನ್ನು ಕಾನೂನು ಪ್ರಕಾರ ಎರಡು ತಿಂಗಳೊಳಗೆ ಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ.
ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ಕೋರಿ ಕಾರ್ಕಳದ ಖಾಸಗಿ ಬಸ್ ನಿರ್ವಾಹಕ ಶರತ್ ಕುಮಾರ್ ಶೆಟ್ಟಿ ಅವರು ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.
‘ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಖಾಸಗಿ ಬಸ್ ನಿರ್ವಾಹಕರು ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಖಾಸಗಿ ಬಸ್ ನಿರ್ವಾಹಕರಿಗೂ ಯೋಜನೆ ಅನ್ವಯವಾಗಬೇಕು. ಸರ್ಕಾರಿ ಬಸ್ ಗಳಂತೆ ಮಹಿಳೆಯರ ಪ್ರಯಾಣ ವೆಚ್ಚವನ್ನು ಖಾಸಗಿ ಬಸ್ ನಿರ್ವಾಹಕರಿಗೆ ಮರುಪಾವತಿ ಮಾಡಬೇಕು’ ಎಂದು ಶರತ್ ಅವರು ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿಯಲ್ಲಿ ಮನವಿ ಮಾಡಿದ್ದರು.