ಬೆಂಗಳೂರು : ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ ಇಟ್ಟಿರುವ ದುಷ್ಕರ್ಮಿಗಳ ವಿರುದ್ಧ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಚಿವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ ನಡೆಸಲು ಯತ್ನಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಸ್.ಟಿ.ಸೋಮಶೇಖರ್ ಆಪ್ತ ಸಹಾಯಕ ಚೇತನ್ ಅವರು ಕೇಂದ್ರ ಸೆನ್ ಠಾಣೆಗೆ ದೂರು ನೀಡಿದ್ದಾರೆ. ಫೇಸ್‌ಬುಕ್‌ನಲ್ಲಿ ಎಸ್.ಟಿ.ಸೋಮಶೇಖರ್ ಹೆಸರಿನಲ್ಲಿ ನಕಲಿ ಖಾತೆ ತೆರೆದಿದ್ದ, ಆರೋಪಿಗಳು ಪಕ್ಷ ಹಾಗೂ ಪಕ್ಷದ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ’.
ಮೊಬೈಲ್ ಸಂಖ್ಯೆಯೊಂದನ್ನು ನೀಡಿ ಫೋನ್ ಪೇ ಮೂಲಕ ಹಣ ವರ್ಗಾಯಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಸಚಿವರ ಹೆಸರಿಗೆ ಕಳಂಕ ಉಂಟು ಮಾಡುತ್ತಿರುವ ಆರೋಪಿಗಳ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು’ ಎಂದು ಚೇತನ್ ದೂರಿನಲ್ಲಿ ತಿಳಿಸಿದ್ದಾರೆ.