ಸಿಎಂ ವಿರುದ್ಧ ಸುಳ್ಳು ಸುದ್ದಿ: 7 ಮಂದಿ ವಿರುದ್ಧ FIR

Prasthutha|

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಗಳ ಮತ ಬೇಡ, ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಹೇಳಿದ್ದಾರೆಂದು ಸುದ್ದಿಪತ್ರಿಕೆಯ ವರದಿ ರೀತಿಯಲ್ಲಿ ಸುಳ್ಳು ಸುದ್ದಿ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದ 7 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

- Advertisement -

ಹಿಂದುಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂಬ ರೀತಿಯಲ್ಲಿ ಸುಳ್ಳು ಸುದ್ದಿಯನ್ನು ಬಗ್ಗೆ ಹರೀಶ್‌ ನಾಗರಾಜು ಎಂಬವರು ಪೊಲೀಸರಿಗೆ ದೂರು ನೀಡಿದ್ದರು.

ಅವರ ದೂರಿನ ಆಧಾರದ ಮೇಲೆ ಬೆಂಗಳೂರು ಪಶ್ಚಿಮ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66, 66ಸಿ ಮತ್ತು 66ಡಿ ಹಾಗೂ ಐಪಿಸಿ ಸೆಕ್ಷನ್‌ 153ಎ, 120ಬಿ, 419, 469, 471, 505(2) ಮತ್ತು 468ರ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

- Advertisement -

ವಾರ್ತಾಪತ್ರಿಕೆಯನ್ನೇ ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ ಸಿಎಂ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ‌.

ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು.
ಆದರೂ ನನ್ನ ವಿರುದ್ಧವೇ ಸುಳ್ಳು ಸುದ್ದಿ ಸೃಷ್ಟಿಸಿ, ಜನರ ದಾರಿ ತಪ್ಪಿಸಲು ಯತ್ನಿಸಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ಕಾನೂನಿನ ಮೂಲಕ ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.



Join Whatsapp