ಲಕ್ನೋ: ಅಕ್ಟೋಬರ್ 3 ರಂದು ಲಖಿಂಪುರ ಖೇರಿಯಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಮೃತಪಟ್ಟ ರೈತರ ಕುಟುಂಬಗಳಿಗೆ ನ್ಯಾಯ ಒದಗಿಸಬೇಕೆಂದು ಕಾಂಗ್ರೆಸ್ ಮುಖ್ಯಸ್ಥೆ ಪ್ರಿಯಾಂಕಾ ಗಾಂಧಿ ಶನಿವಾರ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ, ರೈತರನ್ನು ಹತ್ಯೆ ನಡೆಸಿದ ಗೃಹ ಖಾತೆಯ ರಾಜ್ಯ ಸಚಿವರ ಮಗನ ಕುಕೃತ್ಯವನ್ನು ಉಲ್ಲೇಖಿಸಿ ಪ್ರಧಾನಿ ಮೋದಿಗೆ ಪತ್ರ ಬರೆದಿರುವುದಾಗಿ ತಿಳಿಸಿದರು. ಮಾತ್ರವಲ್ಲ ರಾಜಕೀಯ ಒತ್ತಡ ಹೇರಿ ಉತ್ತರ ಪ್ರದೇಶ ಸರ್ಕಾರ ನ್ಯಾಯವನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಘಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ ಪ್ರಿಯಾಂಕಾ, ಲಕ್ನೋದಲ್ಲಿ ನಡೆಯಲಿರುವ ಡಿಜಿಪಿ ಮತ್ತು ಐಜಿ ಸಮ್ಮೇಳನದಲ್ಲಿ ಭಾಗವಹಿಸದಂತೆ ಪ್ರಧಾನಿಗೆ ತಿಳಿಸಿದ್ದಾರೆ. ಪ್ರಧಾನಿಗೆ ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ರೈತರ ಹತ್ಯೆಯಲ್ಲಿ ಪರೋಕ್ಷವಾಗಿ ಶಾಮೀಲಾದ ಗೃಹ ಸಚಿವ ಅಜಯ್ ಮಿಶ್ರಾ ಅವರೊಂದಿಗೆ ವೇದಿಕೆ ಹಂಚಿಕೊಳ್ಳಬಾರದು ಎಂದು ತಿಳಿಸಿದರು.