ಬೆಂಗಳೂರು : ಬಿಜೆಪಿ ಸರಕಾರದ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ನಾಳೆ ರೈತ ಮುಖಂಡರು ದೇಶಾದ್ಯಂತ ರಸ್ತೆ ತಡೆ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲೂ ಪ್ರತಿಭಟನೆ ತೀವ್ರಗೊಳ್ಳಲಿದೆ. ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ ರಾಜ್ಯದಲ್ಲೂ ರಸ್ತೆಗಳು ನಾಳೆ ಬಂದ್ ಆಗಲಿವೆ.
ಮಧ್ಯಾಹ್ನ 12 ಗಂಟೆಯಿಂದ 3 ಗಂಟೆ ವರೆಗೆ ಸಂಯುಕ್ತ ಹೋರಾಟ ಸಮಿತಿಯಿಂದ ಹೆದ್ದಾರಿ ತಡೆ ನಡೆಯಲಿದೆ.
ರಾಜ್ಯ ರೈತ ಸಂಘ, ಹಸಿರುಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರೈತ ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಪ್ರಾಂತ್ಯ ರೈತ ಸಂಘದ ಚಾಮರಸ ಮಾಲಿ ಪಾಟೀಲ್ ಸೇರಿದಂತೆ ವಿವಿಧ ರೈತ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆಯಲಿದ್ದಾರೆ.
ಹೀಗಾಗಿ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ನಾಳೆ ಸಂಚಾರ ಅಸ್ತವ್ಯಸ್ತವಾಗಲಿದೆ. ಬೆಂಗಳೂರಿನ ಹೊರವಲಯದ ಭಾಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲು ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಸಿದ್ಧತೆ ನಡೆದಿದೆ.
ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರಸ್ತೆ ನಡೆಯುವ ಸಾಧ್ಯತೆಗಳಿವೆ.