ಬೆಂಗಳೂರು: ದೆಹಲಿಯಲ್ಲಿ ಕೊರೋನಾ ನಾಲ್ಕನೇ ಅಲೆಯ ಮುನ್ಸೂಚನೆ ಕಂಡುಬಂದಿರುವಾಗಲೇ ಕರ್ನಾಟಕ ರಾಜ್ಯ ಸರಕಾರ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ಕೋವಿಡ್ ನಾಲ್ಕನೇ ಅಲೆ ತಪ್ಪಿಸಲು ಕ್ರಮ ಕೈಗೊಂಡಿರುವ ರಾಜ್ಯ ಆರೋಗ್ಯ ಇಲಾಖೆ ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ ನಿಯಮ ಜಾರಿಗೆ ತಂದಿದೆ. ಸೋಂಕು ಹೆಚ್ಚುತ್ತಿರುವ ದೇಶಗಳಿಂದ ರಾಜ್ಯಕ್ಕೆ ಬಂದವರ ಮೇಲೆ ನಿಗಾವಹಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ಈ ಸಂಬಂಧ ಮಾಹಿತಿ ನೀಡಿರುವ ಸುಧಾಕರ್, ಕರ್ನಾಟಕದಲ್ಲಿ ಮತ್ತೆ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿದ್ದಾರೆ. ಸಾಮಾಜಿಕ ಅಂತರವನ್ನು ಪ್ರತಿಯೊಬ್ಬರು ಪಾಲಿಸಬೇಕು, ಸಭೆ-ಸಮಾರಂಭಗಳಲ್ಲಿ ಸಾಮಾಜಿಕ ಅಂತರ ಪಾಲಿಸಬೇಕು ಎಂದು ಸೂಚನೆ ನೀಡಿದ್ದಾರೆ.
ರಾಜ್ಯದ ಜನರು ಬೂಸ್ಟರ್ ಡೋಸ್ ಲಸಿಕೆ ಹಾಕಿಕೊಳ್ಳುವಂತೆ ಆರೋಗ್ಯ ಸಚಿವರು ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು, ಸರ್ಕಾರ ಮುಂಜಾಗೃತ ಕ್ರಮಕ್ಕೆ ಮುಂದಾಗಿದೆ.