ಹೊಸಪೇಟೆ: ರಾಜ್ಯ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ಫೆ. 14ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಜೆ. ಕಾರ್ತಿಕ್ ಹೇಳಿದ್ದಾರೆ .
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಒಂದು ವರ್ಷಕ್ಕೂ ಹೆಚ್ಚಿನ ಕಾಲ ರೈತರು ಪ್ರತಿಭಟನೆ ನಡೆಸಿ, ಸತತ ಒತ್ತಡ ಹೇರಿದ್ದರಿಂದ ಪ್ರಧಾನಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಕಾಯ್ದೆ ರದ್ದುಗೊಳಿಸಲು ಹಿಂದೇಟು ಹಾಕುತ್ತಿದೆ. ಈ ಸಂಬಂಧ ಹಲವು ಸಲ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಹೇಳಿದರು.
ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಹೋರಾಟ ನಡೆಸಿ ಒತ್ತಾಯಿಸಲಾಗಿತ್ತು. ಆದರೆ, ಸರ್ಕಾರ ಗಂಭೀರವಾಗಿಲ್ಲ. ಬಜೆಟ್ ಮಂಡನೆಯ ದಿನವೇ ಹೋರಾಟ ನಡೆಸಲಾಗುತ್ತಿದ್ದು, ರಾಜ್ಯದ ವಿವಿಧ ಭಾಗಗಳಿಂದ ನೂರಾರು ರೈತರು ಪಾಲ್ಗೊಳ್ಳುವರು ಎಂದು ವಿವರಿಸಿದರು.