ರಾಮೋಜಿ ಫಿಲ್ಮ್​ ಸಿಟಿ ಸ್ಥಾಪಕ ರಾಮೋಜಿ ರಾವ್ ನಿಧನ

Prasthutha|

ರಾಮೋಜಿ ಫಿಲ್ಮ್​ ಸಿಟಿ ನಿರ್ಮಿಸಿದ್ದ ರಾಮೋಜಿ ರಾವ್ ಅವರು ಇಂದು (ಜೂನ್ 8) ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದಕ್ಕಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು.

- Advertisement -

ನವೆಂಬರ್ 16, 1936 ರಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೆದಪರುಪುಡಿ ಗ್ರಾಮದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ ಅವರು, ವಿಶ್ವದ ಅತಿದೊಡ್ಡ ಥೀಮ್ ಪಾರ್ಕ್ ಮತ್ತು ಫಿಲ್ಮ್ ಸ್ಟುಡಿಯೋ, ರಾಮೋಜಿ ಫಿಲ್ಮ್ ಸಿಟಿಯನ್ನು ಸ್ಥಾಪಿಸಿದರು. ಮಾರ್ಗದರ್ಶಿ ಚಿಟ್ ಫಂಡ್, ಈನಾಡು ಪತ್ರಿಕೆ, ಈಟಿವಿ ನೆಟ್‌ವರ್ಕ್, ರಮಾದೇವಿ ಪಬ್ಲಿಕ್ ಸ್ಕೂಲ್, ಪ್ರಿಯಾ ಫುಡ್ಸ್, ಕಲಾಂಜಲಿ, ಉಷಾಕಿರಣ್ ಮೂವೀಸ್, ಮಯೂರಿ ಫಿಲ್ಮ್ ಡಿಸ್ಟ್ರಿಬ್ಯೂಟರ್ಸ್ ಮತ್ತು ಡಾಲ್ಫಿನ್ ಗ್ರೂಪ್ ಆಫ್ ಹೋಟೆಲ್‌ಗಳು ರಾಮೋಜಿ ರಾವ್ ಒಡೆತನದ ಕಂಪನಿಗಳಾಗಿವೆ.

ಭಾರತ ಮಾಧ್ಯಮ ಲೋಕದಲ್ಲಿ ದೂರದೃಷ್ಟಿ ಹೊಂದಿದ್ದ ರಾಮೋಜಿ ರಾವ್ ಅವರ ನಿಧನ ತೀವ್ರ ದುಃಖವನ್ನುಂಟುಮಾಡಿದೆ. ಅವರ ಶ್ರೀಮಂತ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರಗಳ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ. 

- Advertisement -

ಪತ್ರಿಕೋದ್ಯಮ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅವರ ಸಾಧನೆಗಳಿಗಾಗಿ 2016ರಲ್ಲಿ ಭಾರತದ ಎರಡನೇ ಅತ್ಯುನ್ನತ ಪ್ರಶಸ್ತಿ ಪದ್ಮವಿಭೂಷಣ ನೀಡಿ ಗೌರವಿಸಲಾಗಿತ್ತು.

ರಾಮೋಜಿ ರಾವ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, “ಇದು ಅತ್ಯಂತ ದುಃಖಕರ. ಅವರು ಭಾರತೀಯ ಮಾಧ್ಯಮದಲ್ಲಿ ಕ್ರಾಂತಿ ಮಾಡಿದ್ದವರು. ಅವರ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರಗಳ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ರಾಮೋಜಿ ರಾವ್ ಅವರ ಅಗಲಿಕೆ ತುಂಬಲಾರದ ನಷ್ಟ ಎಂದಿದ್ದಾರೆ. “ರಾಜ್ಯ ಸರ್ಕಾರವು ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲು ನಿರ್ಧರಿಸಿದೆ” ಎಂದು ಹೇಳಿದ್ದಾರೆ.



Join Whatsapp