ಬೆಂಗಳೂರು: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೋರಾಟಗಾರ್ತಿ ನಝ್ಮಾ ನಝೀರ್ ಚಿಕ್ಕನೇರಳೆ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಎಂಬ ಆರೋಪಿ ವಿರುದ್ದ ಜಾಮೀನು ರಹಿತ ಸೆಕ್ಷನ್ ಗಳಡಿಯಲ್ಲಿ ಎಫ್ ಐಆರ್ ದಾಖಲಾಗಿದೆ.
ರವಿವಾರ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿರುವ ಕಲ್ಲಡ್ಕ ಪ್ರಭಾಕರ ಭಟ್ ಎಂಬಾತನು “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ಮುಸ್ಲಿಂ ಯುವಕರು ಮಾತ್ರ ಅಲ್ಲ. ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನ ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ?” ಎಂದು ಹೇಳಿಕೆ ನೀಡಿದ್ದಾನೆ. ಈ ಹೇಳಿಕೆಯು ಮಹಿಳೆಯರ ಖಾಸಗಿತನ, ಮಹಿಳೆಯನ್ನು ಲೈಂಗಿಕವಾಗಿ ನಿಂದಿಸುವ, ಮಹಿಳೆಯ ಮೇಲೆ ಸಾರ್ವಜನಿಕರು ಬಲಪ್ರಯೋಗಿಸುವಂತೆ ಪ್ರಚೋದಿಸುವ, ಮಹಿಳೆಗೆ ಲೈಂಗಿಕ, ಜೀವ ಬೆದರಿಕೆ ಒಡ್ಡುವ, ಮಹಿಳೆಯರ ಖಾಸಗಿ ವಿಷಯವನ್ನು ಅಶ್ಲೀಲಗೊಳಿಸುವಿಕೆ, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯ ಬಗೆಗೆ ಅಶ್ಲೀಲವಾಗಿ ಮಾತನಾಡಿದ, ಸಾರ್ವಜನಿಕವಾಗಿ ಮಹಿಳೆಯರನ್ನು ಚುಡಾಯಿಸಿದ, ಮಹಿಳೆಯರ ಘನತೆಗೆ ಅಡ್ಡಿಯಾದ ಪ್ರಕರಣವಾದ್ದರಿಂದ ಐಪಿಸಿ ಸೆಕ್ಷನ್ 294, 354, 509, 506, ಪ್ರಕಾರ ಅಪರಾಧವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.