ಬೆಲೆ ಏರಿಕೆ ವಿರೋಧಿ ಪ್ರತಿಭಟನೆ ಹಿನ್ನೆಲೆ | ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ FIR
Prasthutha: July 14, 2021

ಬೆಂಗಳೂರು: ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಯುವ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಜು.12ರಂದು ರಕ್ಷಾ ರಾಮಯ್ಯ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಯುವ ಕಾಂಗ್ರೆಸ್ ಘಟಕ ಪ್ರತಿಭಟನೆ ನಡೆಸಿತ್ತು.
ಯಾವುದೇ ಅನುಮತಿ ಪಡೆಯದೇ ಕೋವಿಡ್ ನಿಯಮಾವಳಿಗಳನ್ನ ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಲಾಕ್ಡೌನ್ ನಿಯಮಗಳನ್ನು ಉಲ್ಲಂಘನೆ ಮಾಡಿದ ಆರೋಪದಡಿ ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 188, ಎನ್ಡಿಎಂಎ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
