Home ಟಾಪ್ ಸುದ್ದಿಗಳು ಗೋವುಗಳನ್ನು ಏಕೆ ಕಡಿಯಬಾರದು ಎಂಬ ಸಚಿವರ ಹೇಳಿಕೆಗೆ ಮಾಜಿ ಸಿಎಂ ಬೊಮ್ಮಾಯಿ ಆಕ್ಷೇಪ

ಗೋವುಗಳನ್ನು ಏಕೆ ಕಡಿಯಬಾರದು ಎಂಬ ಸಚಿವರ ಹೇಳಿಕೆಗೆ ಮಾಜಿ ಸಿಎಂ ಬೊಮ್ಮಾಯಿ ಆಕ್ಷೇಪ

ಬೆಂಗಳೂರು: ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ.

ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ, ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೊ, ಹೈ ಕಮಾಂಡ್ ಮೆಚ್ಚಿಸಲೊ ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಗೋಹತ್ಯೆ ನಿಷೇಧ ಪ್ರಥಮವಾಗಿ ಪ್ರತಿಪಾದಿಸಿದ್ದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರು. ಪೂಜ್ಯ ಮಹಾತ್ಮಾ ಗಾಂಧಿ ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960 ರ ದಶಕದಲ್ಲಿ ಹಲವಾರು ರಾಜ್ಯಗಳಲ್ಲಿ ಕಾನೂನು ತರಲಾಗಿದೆ.

ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋ ಹತ್ಯೆ ಮಾಡುವ ಕಾನೂನು ಬಾಹಿರ ಕಾರ್ಖಾನೆಗಳು ತಲೆ ಎತ್ತಲಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿ ಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ. ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ‌ ಎಂದು ತಿಳಿಸಿದ್ದಾರೆ.
ಈ ರೀತಿಯ ಹೇಳಿಕೆ ನೀಡುವ ಮೊದಲು ಸಚಿವರು ಆಲೋಚನೆ ಮಾಡಬೇಕು. ಈ ಬಗ್ಗೆ ಸಿಎಂ ಸಚಿವರಿಗೆ ಸೂಕ್ತ ಸಲಹೆ ನೀಡುವುದು ಅವಶ್ಯಕತೆ ಇದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Join Whatsapp
Exit mobile version