ಕೋಲಾರ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಆರ್. ಎಲ್ ಜಾಲಪ್ಪ ಶುಕ್ರವಾರ ನಿಧನರಾಗಿದ್ದಾರೆ.
ಅವರಿಗೆ 96 ವರ್ಷ ವಯಸ್ಸಾಗಿತ್ತು. ಇತ್ತೀಚಿಗೆ ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ತಮ್ಮದೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದರು. 4 ಬಾರಿ ಲೋಕಸಭಾ ಸದಸ್ಯರು ಹಾಗೂ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ನಾಲ್ಕು ಬಾರಿ ಸಂಸದರಾಗಿ ಅವರು ಎಚ್.ಡಿ. ದೇವೇಗೌಡರು ಪ್ರಧಾನಿಯಾಗಿದ್ದಾಗ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು. ರಾಜ್ಯ ಸಚಿವ ಸಂಪುಟದಲ್ಲೂ ಅವರು ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು.
ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ರಾಜಕೀಯ ಗುರುವಾಗಿದ್ದ ಆರ್. ಎಲ್. ಜಾಲಪ್ಪ, ಅವರ ಅಹಿಂದ ಹೋರಾಟಕ್ಕೆ ಬೆನ್ನೆಲುಬಾಗಿದ್ದರು.
ಶಾಸಕರಾಗಿ, ರಾಜ್ಯ ಸರ್ಕಾರದಲ್ಲಿ ಗೃಹ, ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದ ಜಾಲಪ್ಪ ಅವರು ಜನಾನುರಾಗಿಯಾಗಿ ಕೆಲಸ ಮಾಡಿದ ಧೀಮಂತ ನಾಯಕರಾಗಿದ್ದರು.
ಅನೇಕ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸುವ ಜೊತೆಗೆ ಸಮಾಜಮುಖಿ ಕಾರ್ಯಗಳಿಂದ ಮನ್ನಣೆ ಪಡೆದಿದ್ದ ಜಾಲಪ್ಪನವರು
ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.