ಲಕ್ನೋ: ಕಾಂಗ್ರೆಸ್ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಅವರ ನಿವಾಸಕ್ಕೆ ಬೆಂಕಿ ಹಚ್ಚಿ ಧ್ವಂಸಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಸಂಘಪರಿವಾರದ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ಚಂದನ್ ಸಿಂಗ್ ಲೋಧಿಯಾಲ್, ಉಮೇಶ್ ಮೆಹ್ತಾ, ರಾಜ್ ಕುಮಾರ್ ಮೆಹ್ತಾ ಮತ್ತು ಕೃಷ್ಣ ಸಿಂಗ್ ಬಿಷ್ತ್ ಎಂದು ಗುರುತಿಸಲಾಗಿದೆ.
ಉತ್ತರಾಖಂಡದ ನೈನಿತಾಲ್ ನಗರದಲ್ಲಿರುವ ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಅವರ ನಿವಾಸಕ್ಕೆ ಬೆಂಕಿ ಹಚ್ಚಿ ದಾಂಧಲೆ ನಡೆಸಿದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಇಸ್ಲಾಮಿಕ್ ಸ್ಟೇಟ್ ಮತ್ತು ಬೊಕೊ ಹರಾಮ್ ಸಂಘಟನೆಗಳನ್ನು ಹಿಂದುತ್ವದೊಂದಿಗೆ ಸಮೀಕರಿಸಿ ಪುಸ್ತಕ ಬಿಡುಗಡೆಗೊಳಿಸಿದ ಹಿರಿಯ ಕಾಂಗ್ರೆಸ್ ನಾಯಕ ಖುರ್ಷಿದ್ ವಿರುದ್ಧ ಬಿಜೆಪಿ ನಾಯಕರು ಸೇರಿದಂತೆ ಸಂಘಪರಿವಾರದ ನಾಯಕರು ಸಲ್ಮಾನ್ ಖುರ್ಷಿದ್ ಅವರನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದರು. ಮಾತ್ರವಲ್ಲ ಖುರ್ಷಿದ್ ಅವರು ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದರು.
ಪ್ರಸಕ್ತ ಆರೋಪಿಯೊಬ್ಬನಿಂದ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾತ್ರವಲ್ಲ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಶಸ್ತ್ರಾಸ್ತ್ರ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಉಪ ಮಹಾನಿರೀಕ್ಷಕರು (ಡಿಜಿಪಿ) ನೀಲೇಶ್ ಆನಂದ್ ಭರ್ನೆ ಮಾಧ್ಯಮಕ್ಕೆ ತಿಳಿಸಿದ್ದಾರೆ.