ಬೆಂಗಳೂರು: ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಪೊಲೀಸ್ ಇಲಾಖೆ, ಆರೋಗ್ಯ, ಅಬಕಾರಿ ಇಲಾಖೆ, ಬಿಬಿಎಂಪಿ, ಬಿಎಂಆರ್ಸಿಎಲ್ ನ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು, ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್ ಹಾಗೂ ಶಾಪಿಂಗ್ ಮಾಲ್, ಸ್ಟಾರ್ ಹೋಟೆಲ್ಗಳಲ್ಲಿ ಹೊಸ ವರ್ಷ ಆಚರಿಸಲು ಹೆಚ್ಚಿನ ಜನಸಂಖ್ಯೆ ಸೇರುವ ಸಾಧ್ಯತೆ ಇದೆ. ಎಲ್ಲ ರೀತಿಯ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು. ರಾಜ್ಯದ ಪ್ರಮುಖ ನಗರಗಳಲ್ಲಿಯೂ ಸಹ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಎನ್ ಐಎ ಅಧಿಕಾರಿಗಳು ಕಳೆದೊಂದು ತಿಂಗಳಿನಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ದಾಳಿ ನಡೆಸಿ, ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಕ್ರಿಸ್ ಮಸ್ ಹಬ್ಬ, ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಹೊರಗಡೆಯಿಂದ ಬರುವವರ ಚಲನವಲನಗಳ ಬಗ್ಗೆ ಸೂಕ್ತ ನಿಗಾವಹಿಸಬೇಕು ಎಂದು ಹೇಳಿದರು.