ಮಂಗಳೂರು: ನಗರದ ಕಾರ್ಖಾನೆಯೊಂದರಲ್ಲಿ ವಿಷಾನಿಲ ಸೋರಿಕೆಯಾದ ಪ್ರಕರಣದಲ್ಲಿ ಸಾವನ್ನಪ್ಪಿದ ಕಾರ್ಮಿಕರ ಸಂಖ್ಯೆ ಐದಕ್ಕೇರಿದೆ.
ಎಸ್ ಇಝೆಡ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೀನಿನ ಫ್ಯಾಕ್ಟರಿಯಲ್ಲಿ ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸುವಾಗ ವಿಷಾನಿಲ ಸೋರಿಕೆಯಾಗಿ ಈ ದುರಂತ ಸಂಭವಿಸಿದೆ.
ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದರು. ಹಲವರು ಅಸ್ವಸ್ಥಗೊಂಡಿದ್ದರು. ಇಂದು ಬೆಳಗ್ಗೆ ಮತ್ತಿಬ್ಬರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಶ್ಚಿಮ ಬಂಗಾಳದ ಉಮರ್ ಫಾರೂಕ್, ನಿಝಾಮುದ್ದೀನ್ ಸಾಬ್, ಸಮೀರುಲ್ಲಾ ಇಸ್ಲಾಂ ಸೇರಿ ಐವರು ಮೃತಪಟ್ಟಿದ್ದಾರೆ. ಗಂಭೀರವಾಗಿ ಅಸ್ವಸ್ಥರಾಗಿರುವವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚಿಕಿತ್ಸೆ ಪಡೆಯುತ್ತಿರುವ ಮಿರಾಜುಲ್ಲ್ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬುಲ್ಲ, ಅಫ್ತಲ್ ಮಲ್ಲಿಕ್ ಸೇರಿದಂತೆ ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
ಮೀನಿನ ಕಾರ್ಖಾನೆಯಲ್ಲಿ ರಾತ್ರಿ ವೇಳೆ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕ್ ನ್ನು ಶುಚಿಗೊಳಿಸಲು ಪಶ್ಚಿಮ ಬಂಗಾಳದ ಮೃತ ಹಾಗೂ ಅಸ್ವಸ್ಥಕ್ಕೊಳಗಾದವರು ಕೆಳಗಿಳಿದಿದ್ದು, ಈ ಸಂದರ್ಭದಲ್ಲಿ ಓರ್ವ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ.
ಕೂಡಲೇ ಆತನನ್ನು ರಕ್ಷಿಸಲು ಇತರ ಕಾರ್ಮಿಕರು ಹೋಗಿದ್ದಾರೆ. ಈ ವೇಳೆ ಅವರು ಕೂಡಾ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ. ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಐವರು ಮಂದಿ ಮೃತಪಟ್ಟಿದ್ದರೆ, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಡಿಸಿಪಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವು ಬಜಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.