Home ಟಾಪ್ ಸುದ್ದಿಗಳು “ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ” ಪ್ರತಿಭಟನೆ

“ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ” ಪ್ರತಿಭಟನೆ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ಹಾಳಾಗುತ್ತಿರುವ ಬೆಂಗಳೂರು ಉಳಿಸಿ ಆಂದೋಲನದ ಅಂಗವಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಮಹಾನಗರದ 300 ಕಡೆಗಳಲ್ಲಿ ಇಂದು ಮೌನ ಪ್ರತಿಭಟನೆ ನಡೆಸಲಾಯಿತು.


ಟ್ರಿನಿಟಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರೊಂದಿಗೆ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.


ಡಿ.ಕೆ.ಶಿವಕುಮಾರ್ ಮಾತನಾಡಿ, ಬೆಂಗಳೂರಿನ ರಸ್ತೆಗಳು ಗುಂಡಿಮಯವಾಗಿದ್ದು, ಬೆಂಗಳೂರು ರಸ್ತೆ ಗುಂಡಿಗಳ ರಾಜಧಾನಿಯಾಗಿದೆ. ಕಸದ ಸಮಸ್ಯೆ ಹೆಚ್ಚಾಗಿದೆ. 40% ಕಮಿಷನ್ ಭ್ರಷ್ಟಾಚಾರದಿಂದ ನಗರದ ಕಾಮಗಾರಿಗಳು ಕಳಪೆಯಾಗಿವೆ. ದೇಶದಲ್ಲಿ ಕರ್ನಾಟಕ ಭ್ರಷ್ಟಾಚಾರದ ರಾಜಧಾನಿಯಾಗಿದೆ. ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದ ಅನೇಕ ಸಾವುಗಳು ಸಂಭವಿಸಿದ್ದು, ಬಿಜೆಪಿ ಸರ್ಕಾರ ಈ ಸಮಸ್ಯೆಗೆ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು.


ಇದಕ್ಕೆಲ್ಲ ಉತ್ತರ ನೀಡುವವರು ಯಾರು? ಸರ್ಕಾರದ ದುರಾಡಳಿತದ ಬಗ್ಗೆ ಕಾಂಗ್ರೆಸ್ ಪಕ್ಷದಿಂದ ಕೇಳಲಾದ ಪ್ರಶ್ನೆಗಳಿಗೆ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ. ಬಿಜೆಪಿ ಸರ್ಕಾರಕ್ಕೆ ಬೆಂಗಳೂರು ನಗರ ಹಾಗೂ ರಾಜ್ಯದ ಜನರಿಗೆ ನೀಡಿದ್ದ ಮಾತನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದರು.


ಕಾಂಗ್ರೆಸ್ ಪಕ್ಷಕ್ಕೆ ಕೆಲ ಪ್ರಶ್ನೆ ಕೇಳಿ, ಇವುಗಳಿಗೆ ಉತ್ತರ ನೀಡಿದ ನಂತರ ಪ್ರತಿಭಟನೆ ಮಾಡುವಂತೆ ಬಿಜೆಪಿ ಆಗ್ರಹಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್ ಅವರು, ʼಮುಖ್ಯಮಂತ್ರಿಗಳು ಯಾವುದೇ ಮಾಧ್ಯಮಗಳ ವೇದಿಕೆಯಲ್ಲಿ ಚರ್ಚೆಗೆ ಬರಲಿ, ನಾನು ಅವರೆಲ್ಲ ಪ್ರಶ್ನೆಗಳಿಗೂ ಉತ್ತರ ನೀಡಲು ಸಿದ್ಧನಿದ್ದೇನೆ. ಎಲ್ಲ ವಿಚಾರವಾಗಿ ಚರ್ಚೆ ಮಾಡುತ್ತೇವೆ. ನಾವು ಸರ್ಕಾರಕ್ಕೆ ಕೆಲವು ಪ್ರಶ್ನೆಗಳನ್ನು ಕೇಳುತ್ತೇವೆ. ಅವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡುವ ಬದಲು ನೇರಾನೇರ ಚರ್ಚೆಗೆ ಬರಲಿ. ನಾವು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ನೂರಕ್ಕೂ ಹೆಚ್ಚು ಪ್ರಶ್ನೆಗಳನ್ನು ದಿನನಿತ್ಯ ಕೇಳುತ್ತಿದ್ದೇವೆ. ಅದರಲ್ಲಿ ಒಂದು ಪ್ರಶ್ನೆಗೂ ಈ ಸರಕಾರ ಉತ್ತರಿಸಿಲ್ಲ. ಅವರು ಸಮಯ ಹಾಗೂ ವೇದಿಕೆ ನಿಗದಿಪಡಿಸಲಿ, ನಾನು ಚರ್ಚೆಗೆ ಬಂದು ಉತ್ತರ ನೀಡುತ್ತೇನೆʼ ಎಂದು ತಿಳಿಸಿದರು.

Join Whatsapp
Exit mobile version