ಮುಖ್ಯಮಂತ್ರಿಗಳ ಸಭೆಯಲ್ಲಿ ಸಮರ್ಪಕ ಮಾಹಿತಿ ಒದಗಿಸಲು ದ.ಕ.ಜಿ.ಪಂ. ಸಿಇಒ ಸೂಚನೆ

Prasthutha|

ಮಂಗಳೂರು : ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಆ.1ರ ಮಂಗಳವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ನಿಖರ ಮಾಹಿತಿ ಹಾಗೂ ಸ್ಪಷ್ಟ ಅಂಕಿ ಅಂಶಗಳನ್ನು ನೀಡಬೇಕು ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಅವರು ಸೂಚಿಸಿದರು.

- Advertisement -

 ಅವರು ಜು.31ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲೆಗೆ ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

 ಎಲ್ಲಾ ಇಲಾಖೆಗಳ ಮುಖ್ಯಸ್ಥರೇ ಸಭೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು,  ಯಾವುದೇ ಕಾರಣಕ್ಕೂ ಗೊಂದಲಕ್ಕೆ ಆಸ್ಪದ ನೀಡುವ ಮಾಹಿತಿಯನ್ನು ಸಭೆಗೆ ನೀಡಬಾರದು, ನೂತನ ಸರ್ಕಾರದ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ, ಅನ್ನ ಭಾಗ್ಯದ ಅನುಷ್ಠಾನಗಳ ಬಗ್ಗೆ ಸಂಬಂಧಿಸಿ ಇಲಾಖೆಗಳ ಅಧಿಕಾರಿಗಳು ನಿಖರ ಮಾಹಿತಿ ನೀಡಬೇಕು, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಬಂದರು ಇಲಾಖೆಗಳ ಸಮಗ್ರ ಮಾಹಿತಿ ಕಡಲ್ಕೊರೆತದ ಸಮಸ್ಯೆಗಳು, ಪ್ರಾಕೃತಿಕ ವಿಕೋಪ ಹಾಗೂ ನೀಡಲಾದ ಪರಿಹಾರ, ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಂಬಂಧಿಸಿದವರು ಸೂಕ್ತ ಮಾಹಿತಿ ನೀಡುವಂತೆ ಅವರು ತಿಳಿಸಿದರು.

- Advertisement -

 ಅಲ್ಲದೇ ಮುಖ್ಯಮಂತ್ರಿಯವರು ಜಿಲ್ಲೆಯ ಕಡಲ್ಕೊರೆತ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆಗಳು ಇರಬಹುದು, ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಪೆÇಲೀಸ್ ಸಿಬ್ಬಂದಿಯೊಂದಿಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.



Join Whatsapp