ನವದೆಹಲಿ: ಸೆಪ್ಟೆಂಬರ್ 12 ಕ್ಕೆ ನಿಗದಿಯಾಗಿರುವ ನೀಟ್ ಅನ್ನು ಮುಂದೂಡಲು ನಿರಾಕರಿಸುತ್ತಿರುವ ಒಕ್ಕೂಟ ಸರ್ಕಾರ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದೆಯೆಂದು ಮಂಗಳವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿದ್ಯಾರ್ಥಿಗಳ ವಿಷಯಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರವು ಕುರುಡಾಗಿದೆ. ಈ ಹಿನ್ನೆಲೆಯಲ್ಲಿ ನೀಟ್ ಪರೀಕ್ಷೆಯನ್ನು ಮುಂದೂಡಿ ವಿದ್ಯಾರ್ಥಿಗಳಿಗೆ ನ್ಯಾಯಯುತ ಅವಕಾಶವನ್ನು ನೀಡಲಿ ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.
ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಮ್ ಕೋರ್ಟ್ ವಜಾಗೊಳಿಸಿತ್ತು. ಸಿ.ಬಿ.ಎಸ್.ಸಿ ಮತ್ತು ನೀಟ್ ಪರೀಕ್ಷೆ ಏಕಕಾಲದಲ್ಲಿ ನಡೆಯುವ ಹಿನ್ನೆಲೆಯಲ್ಲಿ ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಸುಪ್ರೀಮ್ ಕೋರ್ಟ್ ಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು.