Home ಕರಾವಳಿ ಮಾರ್ಚ್ 1ರಿಂದ ಸರ್ಕಾರಿ ನೌಕರರ ಮುಷ್ಕರ: ಸರ್ಕಾರಿ ಸೇವೆಯಲ್ಲಿ ವ್ಯತ್ಯಯ ಸಂಭವ

ಮಾರ್ಚ್ 1ರಿಂದ ಸರ್ಕಾರಿ ನೌಕರರ ಮುಷ್ಕರ: ಸರ್ಕಾರಿ ಸೇವೆಯಲ್ಲಿ ವ್ಯತ್ಯಯ ಸಂಭವ

ಮಂಗಳೂರು: ಏಳನೇ ವೇತನ ಆಯೋಗದ ಶಿಫಾರಸುಗಳ ಮತ್ತು ಹಳೆ ಪಿಂಚಣಿ ಯೋಜನೆ (ಓಪಿಎಸ್) ಜಾರಿಗಾಗಿ ಒತ್ತಾಯಿಸಿ ಶಿಕ್ಷಕರು ಸೇರಿದಂತೆ ಸರ್ಕಾರಿ ನೌಕರರು ಮಾರ್ಚ್ 1ರಿಂದ ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿರುವುದರಿಂದ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ನಿಚ್ಛಳವಾಗಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ನೌಕರರು ಕೂಡ ಮುಷ್ಕರಕ್ಕೆ ಬೆಂಬಲ ಸೂಚಿಸಿರುವುದರಿಂದ ಜಿಲ್ಲೆಯಲ್ಲೂ ಸೇವೆಯಲ್ಲಿ ವ್ಯತ್ಯಯವಾಗಲಿದೆ.
ಮಾ.1 ರಿಂದ ಮುಷ್ಕರ ಆರಂಭಿಸುತ್ತೇವೆ. ಇದು ಖಚಿತ, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಸ್ಪಷ್ಟಪಡಿಸಿದ್ದಾರೆ.
ಹೋರಾಟದ ಸಂದರ್ಭದಲ್ಲಿ ನಾವು ಸರ್ಕಾರದ ವಿರುದ್ಧ ಘೋಷಣೆ ಕೂಗುವುದಿಲ್ಲ. ಸಾವಿರಾರು ನೌಕರರನ್ನು ಒಂದೆಡೆ ಸೇರಿಸಿ ಧರಣಿ ನಡೆಸುವುದಿಲ್ಲ. ಆದರೆ ಎಲ್ಲ ಸರ್ಕಾರಿ ನೌಕರರೂ ಕರ್ತವ್ಯಕ್ಕೆ ಗೈರಾಗುವ ಮೂಲಕ ಮನೆಯಲ್ಲಿಯೇ ಇರುತ್ತೇವೆ. ಭವಿಷ್ಯದ ಬದುಕಿಗಾಗಿ ಈ ರೀತಿ ಕರ್ತವ್ಯಕ್ಕೆ ಗೈರು ಹಾಜರಾಗುತ್ತೇವೆ. ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸುವವರೆಗೂ ಈ ಹೋರಾಟ ನಡೆಯಲಿದೆ. ಇದು ಅನಿರ್ದಿಷ್ಟಾವಧಿಯ ಹೋರಾಟವಾಗಿದೆ ಎಂದು ಅವರು ಹೇಳಿದ್ದಾರೆ.


ಸರ್ಕಾರದ ಎಲ್ಲ ಇಲಾಖೆಗಳ, ವೃಂದಗಳ ನೌಕರರೂ ಇದರಲ್ಲಿ ಭಾಗಿಯಾಗುತ್ತಾರೆ. ಇದು ಹೋರಾಟದ ಮೊದಲ ಹಂತ, ಇದಕ್ಕೂ ಸರ್ಕಾರ ಬಗ್ಗದೇ ಇದ್ದಲ್ಲಿ ಮುಂದಿನ ಹೋರಾಟದ ಕುರಿತು ಸರ್ಕಾರಿ ನೌಕರರ ಕುಟುಂಬದ ಸದಸ್ಯರೆಲ್ಲರೂ ಸೇರಿ ತೀರ್ಮಾನಿಸುತ್ತೇವೆ ಎಂದು ಹೇಳಿದ ಅವರು, ದೇಶದಲ್ಲಿಯೇ ಅತ್ಯಂತ ಹೆಚ್ಚು ಸರ್ಕಾರಕ್ಕೆ ಆದಾಯ ತರುವ ರಾಜ್ಯಗಳಲ್ಲಿ ಕರ್ನಾಟಕ ಕೂಡ ಒಂದು. ಆದರೆ ದೇಶದಲ್ಲಿಯೇ ಅತ್ಯಂತ ಕಡಿಮೆ ವೇತನವನ್ನು ನಮ್ಮ ನೌಕರರಿಗೆ ನೀಡಲಾಗುತ್ತಿದೆ. ಸರ್ಕಾರಿ ನೌಕರರ ಬಗ್ಗೆ ಸರ್ಕಾರ ಉದಾಸೀನತೆ ತೋರುತ್ತಿರುವುದರಿಂದ ಅಸಮಾಧಾನಗೊಂಡು, ಅನಿವಾರ್ಯವಾಗಿ ಈ ಹೋರಾಟಕ್ಕಿಳಿದಿದ್ದೇವೆ ಎಂದು ಹೇಳಿದರು.


ದಿನಾಂಕ 01-07-2022ರಿಂದ ಜಾರಿಗೆ ಬರುವಂತೆ ಶೇ.40 ರಷ್ಟು ವೇತನ ಹೆಚ್ಚಳ ಮಾಡಬೇಕು. ಸರ್ಕಾರಿ ಆದೇಶ ಹೊರಡಿಸುವ ಮೂಲಕ ಇದನ್ನು ಅನುಷ್ಠಾನಗೊಳಿಸಬೇಕು. ಇದರ ಜತೆಗೆ ಪಂಜಾಬ್, ರಾಜಸ್ಥಾನ, ಛತ್ತಿಸ್’ಗಢ, ಜಾರ್ಖಂಡ್, ಹಿಮಾಚಲಪ್ರದೇಶ ರಾಜ್ಯಗಳ ಮಾದರಿಯಲ್ಲಿ ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

Join Whatsapp
Exit mobile version