Home ಕರಾವಳಿ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಪೂರಕ ಕ್ರಮ: ಸಚಿವ ಎಸ್. ಅಂಗಾರ ಭರವಸೆ

ಜಿಲ್ಲೆಯ ಪ್ರವಾಸೋದ್ಯಮಕ್ಕೆ ಪೂರಕ ಕ್ರಮ: ಸಚಿವ ಎಸ್. ಅಂಗಾರ ಭರವಸೆ

ಮಂಗಳೂರು: ಜಿಲ್ಲೆಯ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಅದರ ಬಳಕೆಗೆ ಅಗತ್ಯ ಕ್ರಮಗಳನ್ನು ವಹಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಅಂಗಾರ ಅವರು ಅಭಿಪ್ರಾಯಪಟ್ಟರು.

ಅವರು ಸೆ.27ರ ಸೋಮವಾರ ನಗರದ ಓಷಿಯನ್ ಪರ್ಲ್ ಹೋಟೆಲ್‍ನಲ್ಲಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯ ಪ್ರವಾಸೋದ್ಯಮದ ಅಭಿವೃದ್ದಿಗೆ ರೂಪು ರೇಷೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಪ್ರವಾಸೋದ್ಯಮಕ್ಕೆ ಸೂಕ್ತವಾದ ಸ್ಥಳಗಳಿದ್ದು, ಅವುಗಳನ್ನು ಗುರುತಿಸುವ ಅಗತ್ಯವಿದೆ ಎಂದ ಸಚಿವರು ಪ್ರವಾಸೋದ್ಯಮಕ್ಕೆ ಪೂರಕವಾಗಿ ಸರಕಾರದ ಕೆಲವೊಂದು ನೀತಿಗಳನ್ನು ಸರಳೀಕರಿಸುವ ಕಾರ್ಯವೂ ಆಡಳಿತ ವರ್ಗದಿಂದ ಆಗಬೇಕಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ, ಜಿಲ್ಲೆಯಲ್ಲಿನ ಅತ್ಯುತ್ತಮ ಪ್ರವಾಸಿ ತಾಣಗಳನ್ನು ಜಗತ್ತಿಗೆ ತೋರಿಸಬೇಕಿದೆ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿಯೇ ಮೂರು ಪ್ರವಾಸಿ ತಾಣಗಳಿದ್ದು, ಅವುಗಳನ್ನು ಪ್ರವಾಸೋದ್ಯಮಕ್ಕೆ ಪೂರಕವಾಗಿ ಅಭಿವೃದ್ದಿ ಮಾಡುವ ನಿಟ್ಟಿನಲ್ಲಿ ಚಿಂತನೆ ಮಾಡಲಾಗಿದೆ. ಅದಕ್ಕೆ ಕೋಟ್ಯಾಂತರ ರೂ.ಗಳ ಅಗತ್ಯವಿದ್ದು, ಸರಕಾರದೊಂದಿಗೆ ಖಾಸಗಿ ಪಾಲುದಾರಿಕೆಯಲ್ಲಿ ಉತ್ತಮ ಪ್ರವಾಸಿ ತಾಣವಾಗಿಸುವಲ್ಲಿ ಕ್ರಮ ವಹಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರು ಮಾತನಾಡಿ, ರಾಜ್ಯವು 320 ಕಿ.ಮೀ ಉದ್ದದ ಕರಾವಳಿ ಹೊಂದಿದ್ದು, ನೆರೆಯ ಕೇರಳ ಹಾಗೂ ಗೋವಾ ರಾಜ್ಯಗಳಂತೆ ಪ್ರವಾಸೋದ್ಯಮದಲ್ಲಿ ಅಭಿವೃದ್ದಿಯನ್ನು ಕಾಣುವ ಅಗತ್ಯತೆ ಇದೆ, ಅದಕ್ಕೆ ಸಂಬಂಧಿಸಿದ ಅಧಿಕಾರಿಗಳು ದೂರದೃಷ್ಟಿಯ ಮೂಲಕ ಪ್ರವಾಸೋದ್ಯಮಕ್ಕೆ ಯೋಜನೆಗಳನ್ನು ರೂಪಿಸಬೇಕಾಗಿದೆ ಎಂದರು.

ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ ಮಿಜಾರು ಮಾತನಾಡಿ, ಜಿಲ್ಲೆಯಲ್ಲಿನ ಪ್ರವಾಸೋದ್ಯಮಕ್ಕೆ ಪೂರಕವಾದ ಅವಕಾಶಗಳನ್ನು ವಿಶ್ವಕ್ಕೆ ತಿಳಿಸಿಕೊಡಬೇಕು ಎಂದರು.

ಪ್ರಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಕೇರಳದ ಬೇಕಲ್ ಕೋಟೆ, ನೆರೆಯ ಪಡುಬಿದ್ರೆ ಬೀಚ್‍ನಂತೆಯೇ ಮಂಗಳೂರಿನ ಬೀಚ್‍ಗಳಿಗೂ ಬ್ಲೂಟ್ಯಾಗ್ ಮೂಲಕ ಪ್ರವಾಸಿಗರನ್ನು ಆಕರ್ಷಿಸಲು ಕ್ರಮ ವಹಿಸಲಾಗುವುದು. ಇದಕ್ಕೆ ಸಂಬಂಧಿಸಿದ ಪ್ರಕ್ರಿಯೆ ಟೆಂಡರ್ ಹಂತದಲ್ಲಿದೆ, ನವೆಂಬರ್ ವೇಳೆಗೆ ಕಾಮಗಾರಿ ಆರಂಭವಾಗುವ ಸಾಧ್ಯತೆ ಇದೆ ಎಂದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಬೀಚ್‍ಗಳು ಗುರುತಿಸಲ್ಪಟ್ಟಾಗ ಪ್ರವಾಸಿಗರನ್ನು ಆಕರ್ಷಿಸಲು ಸಾಧ್ಯಾಗಲಿದೆ. ಕೊರೋನ 3ನೆ ಅಲೆಯನ್ನು ನೋಡದಂತೆ ಮುಂಜಾಗೃತಾ ಕ್ರಮಗಳೊಂದಿಗೆ ನಮ್ಮಲ್ಲಿನ ಪ್ರವಾಸೋದ್ಯಮಕ್ಕೆ ಪೂರಕವಾದ ಯೋಜನೆಗಳಿಗೆ ಒತ್ತು ನೀಡಬೇಕಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳನ್ನು ಪ್ರದರ್ಶಿಸುವ ಎರಡು ನಿಮಿಷಗಳ ವೀಡಿಯೋಗೆ ಸಚಿವರು ಬಿಡುಗಡೆ ಮಾಡಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‍ಸಾರ್ ವೇದಿಕೆಯಲ್ಲಿದ್ದರು.
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ ಸ್ವಾಗತಿಸಿದರು. ಮಂಜುಳಾ ಶೆಟ್ಟಿ ನಿರೂಪಿಸಿದರು.

Join Whatsapp
Exit mobile version