Home ಟಾಪ್ ಸುದ್ದಿಗಳು ವಿವಾದಿತ ಮತಾಂತರ ನಿಷೇಧ ಕಾಯ್ದೆಯ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ವಿವಾದಿತ ಮತಾಂತರ ನಿಷೇಧ ಕಾಯ್ದೆಯ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

►► ಇನ್ನು ಮುಂದೆ ಮತಾಂತರದ ಮೊದಲು ಘೋಷಣೆ ಕಡ್ಡಾಯ

ಬೆಂಗಳೂರು: ವಿವಾದಿತ ಮತಾಂತರ ನಿಷೇಧ ಕಾಯ್ದೆಯ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕುಸಂರಕ್ಷಣಾ ಆಧ್ಯಾದೇಶ-2022 ಜಾರಿಗೆ ಬಂದಂತಾಗಿದೆ.

ನಗದು ರೂಪದಲ್ಲಾಗಲೀ, ವಸ್ತುವಿನ ರೂಪದಲ್ಲಾಗಲೀ ನೀಡುವ ಯಾವುದೇ ಉಡುಗೊರೆ, ಪ್ರತಿಫಲ, ಸುಲಭ ಹಣ ಅಥವಾ ಭೌತಿಕ ಪ್ರಯೋಜನ, ಯಾವುದೇ ಧಾರ್ಮಿಕ ಸಂಸ್ಥೆ ನಡೆಸುತ್ತಿರುವ ಶಾಲೆ ಅಥವಾ ಕಾಲೇಜಿನಲ್ಲಿ ಉದ್ಯೋಗ, ಉಚಿತ ಶಿಕ್ಷಣ ಅಥವಾ ಉತ್ತಮ ಜೀವನ ಶೈಲಿ, ದೈವಿಕ ಅಸಂತೋಷ ಮುಂತಾದ ರೂಪದಲ್ಲಿ ಆಮಿಷ ಒಡ್ಡುವುದು ಈ ಸುಗ್ರೀವಾಜ್ಞೆಯಲ್ಲಿ ಅಪರಾಧ ಎಂದು ಪರಿಗಣಿಸಲಾಗಿದೆ.

ಕಳೆದ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ‌ ಅಧಿವೇಶನದಲ್ಲಿ ಈ ಮಸೂದೆಯನ್ನು ಸಿದ್ಧಪಡಿಸಲಾಗಿತ್ತು. ವಿಧಾನಸಭೆಯ ಒಪ್ಪಿಗೆ ಪಡೆದಿದ್ದ ಈ ಮಸೂದೆಯನ್ನು ವಿಧಾನ ಪರಿಷತ್‌ ನಲ್ಲಿ ಮಂಡಿಸಿ ಅಂಗೀಕರಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಿರಲಿಲ್ಲ. ಆದ್ದರಿಂದ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಲು ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು.

 ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿ, ಸಹವರ್ತಿ ಅಥವಾ ಸಹೋದ್ಯೋಗಿಗಳಿಗೂ ಮತಾಂತರದ ಬಗ್ಗೆ ದೂರನ್ನು ನೀಡಿದರೆ ಎಫ್ ಐಆರ್ ದಾಖಲಿಸುವ ಅವಕಾಶವಿದೆ.

ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಐದು ವರ್ಷಗಳವರೆಗೆ  ಜೈಲು ಶಿಕ್ಷೆ ಹಾಗೂ ಇಪ್ಪತ್ತೈದು ಸಾವಿರ ರೂಪಾಯಿಗಳ ದಂಡ‌ ವಸೂಲಾತಿಗೆ ಅವಕಾಶವಿದೆ. ಅಪ್ರಾಪ್ತ ವ್ಯಕ್ತಿ, ಮಹಿಳೆ, ಎಸ್ ಸಿ, ಎಸ್ ಟಿ  ಸೇರಿದ ವ್ಯಕ್ತಿಯ ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಹತ್ತು ವರ್ಷಗಳ ವರೆಗೆ ಜೈಲು ಶಿಕ್ಷೆಗೆ ಕಾಯ್ದೆಯಲ್ಲಿ ಅವಕಾಶವಿದೆ. ಅಷ್ಟೇ ಅಲ್ಲದೆ 50 ಸಾವಿರ ದಂಡ ವಸೂಲಿಗೂ ಅವಕಾಶವಿದೆ.

ಮತಾಂತರಕ್ಕೆ ಬಲಿಯಾದವರಿಗೆ ಆಪಾದಿತನಿಂದ ಸಂದಾಯವಾಗುವಂತೆ ಗರಿಷ್ಠ ಐದು ಲಕ್ಷ ರೂಪಾಯಿ ಪರಿಹಾರ ಕೊಡಿಸಲು ಅವಕಾಶ ಕಲ್ಪಿಸಲಾಗಿದೆ. ಅಪರಾಧ ಪುನರಾವರ್ತನೆ ಆದಲ್ಲಿ ಐದು ವರ್ಷ ಜೈಲು ಶಿಕ್ಷೆ ಹಾಗೂ ಎರಡು ಲಕ್ಷ ದಂಡ ವಸೂಲಿಗೂ ಅವಕಾಶವಿದೆ.

ಮತಾಂತರದ ಉದ್ದೇಶದಿಂದ ಆದ ಮದುವೆಯನ್ನು ಅಸಿಂಧುವೆಂದು ಘೋಷಿಸಲು ನ್ಯಾಯಾಲಯಕ್ಕೆ ಅವಕಾಶ ನೀಡಲಾಗಿದೆ.

ಮತಾಂತರವಾಗಲು‌ ಮುಂದಾಗಿರುವ ವ್ಯಕ್ತಿ  ಕನಿಷ್ಠ ಆರವತ್ತು ದಿನಗಳ ಮೊದಲು ಜಿಲ್ಲಾ ದಂಡಾಧಿಕಾರಿಗೆ ಈ ಬಗ್ಗೆ ತಿಳಿಸಬೇಕು.

ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆ ಜಿಲ್ಲಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ  ಈ ಬಗ್ಗೆ ಮಾಹಿತಿ ಕೊಡಬೇಕು.

ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆ 30 ದಿನಗಳ ಒಳಗಾಗಿ ಆಕ್ಷೇಪನೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಲು ಅವಕಾಶ ಇದೆ.

ವಿಚಾರಣೆಯ ಸಂದರ್ಭದಲ್ಲಿ ತಪ್ಪು  ಕಂಡುಬಂದಲ್ಲಿ ಕ್ರಿಮಿನಲ್‌ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.

ಮತಾಂತರಗೊಂಡ ವ್ಯಕ್ತಿಯೂ ಮತಾಂತರಗೊಂಡ ದಿನಾಂಕದಿಂದ‌ ಹಿಡಿದು ಮೂಲ ಧರ್ಮ, ಮತಾಂತರಗೊಂಡ ಧರ್ಮ ಹಾಗೂ ಇನ್ನಿತರ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಬೇಕು. ಅಪರಾಧಕ್ಕೆ ನೆರವು ಹಾಗೂ ದುಷ್ಪ್ರೇರಣೆ ನೀಡಿದ ವ್ಯಕ್ತಿಯನ್ನು ಆರೋಪಿಯನ್ನಾಗಿ ಪರಿಗಣಿಸುವ ಅವಕಾಶವೂ ಇದೆ.

Join Whatsapp
Exit mobile version