ವೇತನ ಪರಿಷ್ಕರಣೆ, ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಆಗ್ರಹಿಸಿ ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಸರಕಾರಿ ನೌಕರರ ಸಂಘ

Prasthutha|

ಮಂಗಳೂರು: ವೇತನ ಭತ್ಯೆಗಳ ಪರಿಷ್ಕರಣೆ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವನ್ನು ಆಗ್ರಹಿಸಿ ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದ.ಕ. ಜಿಲ್ಲಾಧ್ಯಕ್ಷ ಪಿ.ಕೆ.ಕೃಷ್ಣ ತಿಳಿಸಿದ್ದಾರೆ.

- Advertisement -


ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೇ ಫೆ.21ರಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಎಲ್ಲಾ ಜಿಲ್ಲೆ, ತಾಲ್ಲೂಕು ಮತ್ತು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು-ಪದಾಧಿಕಾರಿಗಳ “ತುರ್ತು ರಾಜ್ಯ ಕಾರ್ಯಕಾರಿಣಿ ಸಭೆ” ಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಆಗ್ರಹಪಡಿಸಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಮಾರ್ಚ್ 1ರಿಂದ ‘ಅನಿರ್ದಿಷ್ಟಾವಧಿ ಮುಷ್ಕರ’ ಕ್ಕೆ ಕರೆ ನೀಡಲು ನಿರ್ಣಯ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ ಯಾರು ಕೂಡ ಕರ್ತವ್ಯಕ್ಕೆ ಹಾಜರಾಗದಂತೆ ಸೂಚಿಸಲಾಗಿದೆ. ಜಿಲ್ಲೆಯಲ್ಲೂ ನೌಕರರು ಕೆಲಸಕ್ಕೆ ಹಾಜರಾಗದಿರಲು ನಿರ್ಧರಿಸಲಾಗಿದೆ ಎಂದು ಹೇಳಿದರು.


ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ದಿನಾಂಕ: ೦1-೦7-2022 ರಿಂದ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು, 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿಯನ್ನು ಪಡೆದು, ಚುನಾವಣೆ ನೀತಿ ಸಂಹಿತೆ ಜಾರಿಗೆ ಮೊದಲು ಶೇ. 40% ಫಿಟ್’ಮೆಂಟ್ ಸೌಲಭ್ಯವನ್ನು ದಿನಾಂಕ: ೦1-೦7-2022ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸಬೇಕು. ರಾಜ್ಯದ ಎನ್.ಪಿ.ಎಸ್.ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್ಘಡ, ಜಾರ್ಖಂಡ್, ಹಿಮಾಚಲಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್. ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಗಳಾಗಿವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಗಣೇಶ್ ರಾವ್, ಜಿಲ್ಲಾ ಕೋಶಾಧಿಕಾರಿ ನವೀನ್ ಕುಮಾರ್ ಎಂ.ಎಸ್., ಉಪಾಧ್ಯಕ್ಷ ಹರೀಶ್ ಕುಮಾರ್ ಹಾಜರಿದ್ದರು.



Join Whatsapp