ಬೆಂಗಳೂರು; ರಾಜ್ಯದ ಚಿಕ್ಕಬಳ್ಳಾಪುರ, ಹಾವೇರಿ, ಯಾದಗಿರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಾಲ್ಕು ಸರ್ಕಾರಿ ವೈದ್ಯಕೀಯ ಕಾಲೇಜುಗಳು ಬರುವ ಮಾರ್ಚ್ ವೇಳೆಗೆ ಉದ್ಘಾಟನೆಗೊಳ್ಳಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಅರೂರು ಬಳಿ ಸುಮಾರು ೬೫೦ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಚಿಕ್ಕಬಳ್ಳಾಪುರ ವೈದ್ಯಕೀಯ ವಿಜ್ಞಾನಗಳ ಹಾಗೂ ಸಂಶೋಧನಾ ಸಂಸ್ಥೆಯ ಕಾಮಗಾರಿಯನ್ನು ಪರಿಶೀಲಿಸಿದ ನಂತರ ಅವರು ಮಾತನಾಡಿದರು.
ಸರ್ಕಾರ ಪ್ರತಿ ಜಿಲ್ಲೆಗೊಂದರಂತೆ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಆರಂಭಿಸಲು ನಿರ್ಧರಿಸಿದ್ದು, ವಿಜಯಪುರ, ಉಡುಪಿ, ದಾವಣಗೆರೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ೯ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗುವುದು. ಅಲ್ಲದೇ ಈ ವರ್ಷ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ ಅನುದಾನದೊಂದಿಗೆ ರಾಮನಗರ ಜಿಲ್ಲೆಯಲ್ಲಿ ಹಾಗೂ ಸರ್ಕಾರದ ಅನುದಾನದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.