Home ಟಾಪ್ ಸುದ್ದಿಗಳು ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳು ಆರಂಭ

ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳು ಆರಂಭ

ಬೆಂಗಳೂರು: ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳನ್ನು ಆರಂಭಿಸಲಾಗಿದೆ.ಎಲ್ಲ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ ಸಿಗಬೇಕೆಂಬ ಉದ್ದೇಶದಿಂದ ಇದನ್ನು ಪ್ರಾರಂಭ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭೆ ಕ್ಷೇತ್ರದ ಪ‍ಟ್ಟೆಗಾರಪಾಳ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಅಡಿಯಲ್ಲಿ ಆರಂಭಿಸಿರುವ ಸರ್ಕಾರಿ ಮಾಂಟೆಸ್ಸರಿ ಪೂರ್ವ ಪ್ರಾಥಮಿಕ ಕೇಂದ್ರಕ್ಕೆ (ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ) ಚಾಲನೆ ನೀಡಿ ಅವರು ಹೀಗೆ ಹೇಳಿದರು.

ಮಕ್ಕಳ ಆರಂಭಿಕ ಶಿಕ್ಷಣ ಮತ್ತು ಆರೈಕೆಗೆ (ಇಸಿಸಿಇ) ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಿ, ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಶಿಕ್ಷಣ ಇಲಾಖೆಯಿಂದ ಆರಂಭಿಸುವ ಯೋಜನೆ ಇತ್ತು. ಆದರೆ, ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ಮಣಿದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗಿದೆ ಎಂದು ಹೇಳಿದರು.

ಸರ್ಕಾರಿ ಮಾಂಟೆಸ್ಸರಿಗಳಲ್ಲಿ ಕನ್ನಡ, ಇಂಗ್ಲಿಷ್ ಎರಡೂ ಮಾಧ್ಯಮಗಳಲ್ಲಿ ಶಿಕ್ಷಣ ನೀಡಲಾಗುವುದು. ಮಕ್ಕಳಿಗೆ ಒಂದು ಜೊತೆ ಸಮವಸ್ತ್ರ, ಒಂದು ಬ್ಯಾಗ್ ಮತ್ತು ಪೆನ್ಸಿಲ್‌ ಬಾಕ್ಸ್ ನೀಡಲಾಗುವುದು. ಮಕ್ಕಳ ಮುಂದಿನ ಶೈಕ್ಷಣಿಕ ಅನುಕೂಲಕ್ಕಾಗಿ ವರ್ಗಾವಣೆ ಪತ್ರ ಕೂಡ ನೀಡಲಾಗುವುದು. ಮಾಂಟೆಸ್ಸರಿಗಳಲ್ಲಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಹಾಗೂ ಅಗತ್ಯ ತರಬೇತಿ ಪಡೆದಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಮಾತ್ರ ಬೋಧಕರಾಗಿ ಬಳಸಿಕೊಳ್ಳಲಾಗುವುದು’ ಎಂದರು.

‘ಪ್ರಾಯೋಗಿಕವಾಗಿ ಬೆಂಗಳೂರು ನಗರ ಜಿಲ್ಲೆಯ 250 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿಗಳನ್ನು ಆರಂಭಿಸಲಾಗಿದೆ. ಹಂತ-ಹಂತವಾಗಿ ರಾಜ್ಯದ ಐದು ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಮಾಂಟೆಸ್ಸರಿಗಳನ್ನು ಪ್ರಾರಂಭಿಸಲು ನಮ್ಮ ಇಲಾಖೆ ಸನ್ನದ್ಧವಾಗಿದೆ’ ಎಂದು ತಿಳಿಸಿದರು.

Join Whatsapp
Exit mobile version