Home ಟಾಪ್ ಸುದ್ದಿಗಳು ತುಂಗಭದ್ರಾ ಗೇಟ್ ಕುಸಿತಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಆರ್. ಅಶೋಕ್

ತುಂಗಭದ್ರಾ ಗೇಟ್ ಕುಸಿತಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಆರ್. ಅಶೋಕ್

ಬೆಂಗಳೂರು: ರಾಜ್ಯ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಚೈನ್ ಲಿಂಕ್ ಮುರಿದು ಬಿದ್ದಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ದೂರಿದ್ದಾರೆ.


ಈ ಕುರಿತು ‘ಎಕ್ಸ್’ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ನೀರಾವರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಮ್ಮ ಇಲಾಖೆಗಳ ನಿರ್ವಹಣೆಗಿಂತ ಕಾಂಗ್ರೆಸ್ ಹೈಕಮಾಂಡ್ ಏಜೆಂಟ್ ಕೆಲಸವೇ ಹೆಚ್ಚಾಗಿದೆ. ಪ್ರಜೆಗಳ ಹಿತಕ್ಕಿಂತ, ಪಕ್ಷದ ಹಿತವೇ ಆದ್ಯತೆ ಆಗಿದೆ ಎಂದು ಟೀಕಿಸಿದ್ದಾರೆ.


ಭ್ರಷ್ಟಾಚಾರ, ರಾಜಕೀಯ ಮೇಲಾಟ, ಬಣ ಬಡಿದಾಟ, ಪಕ್ಕದ ರಾಜ್ಯಗಳ ಚುನಾವಣೆಗೆ ಹಣ ಹೊಂದಿಸುವಲ್ಲಿ ಬ್ಯುಸಿಯಾಗಿರುವ ಉಪಮುಖ್ಯಮಂತ್ರಿಗಳಿಗೆ ಇಲಾಖೆ ಕರ್ತವ್ಯ ನಿವರ್ಹಿಸಲು ಪಾಪ ಸಮಯ ಎಲ್ಲಿದೆ ಎಂದು ಅವರು ಪ್ರಶ್ನಿಸಿದ್ದಾರೆ.


ಕಳೆದ ವರ್ಷವೆಲ್ಲ ಬರಗಾಲದಿಂದ ತತ್ತರಿಸಿದ್ದ ರೈತರು ಈ ವರ್ಷ ಉತ್ತಮ ಮಳೆಯಾಗಿ ಜಲಾಶಯ ಭರ್ತಿಯಾಗಿರುವುದರಿಂದ ಎರಡು ಬೆಳೆ ತೆಗೆಯಬಹುದು ಎಂದು ನಿಟ್ಟುಸಿರು ಬಿಡುತ್ತಿರುವಾಗಲೇ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಈಗ ಬಿತ್ತನೆಯಾಗಿರುವ ಒಂದು ಬೆಳೆಯೂ ಸಹ ಕೈತಪ್ಪಬಹುದು ಎಂಬ ಆತಂಕದಲ್ಲಿದ್ದಾರೆ ಎಂದಿದ್ದಾರೆ.

Join Whatsapp
Exit mobile version