Home ಟಾಪ್ ಸುದ್ದಿಗಳು ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಸನ್ನದ್ಧ: ಸಚಿವ ಕೃಷ್ಣ ಬೈರೇಗೌಡ

ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಸನ್ನದ್ಧ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಎಲ್ಲಾ ಹಂತದಲ್ಲಿ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ. ಜನವರಿ, ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಎದುರಾಗಬಹುದಾದ ಸವಾಲುಗಳ ಬಗ್ಗೆ ಈಗಿನಿಂದಲೇ ಎಚ್ಚೆತ್ತುಕೊಂಡು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ವಿಧಾನ ಪರಿಷತ್ ಕಲಾಪದಲ್ಲಿ ರಾಜ್ಯದಲ್ಲಿ ಉಂಟಾಗಿರುವ ಬರಗಾಲದ ಪರಿಸ್ಥಿತಿಯನ್ನು ನಿಭಾಯಿಸಲು ಮುಂಜಾಗ್ರತಾ ಕ್ರಮಕೈಗೊಳ್ಳುವ ಕುರಿತು ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಎನ್ ರವಿಕುಮಾರ, ನಿರಾಣಿ ಹನುಮಂತಪ್ಪ ರುದ್ರಪ್ಪ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರು ನಿಯಮ 68ರ ಮೇರೆಗೆ ಎತ್ತಿದ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸಿದ ಸಚಿವರು, ಬರ ನಿರ್ವಹಣೆಗಾಗಿ ಈಗಾಗಲೇ ನಾವು ಕೇಂದ್ರ ಸರ್ಕಾರಕ್ಕೆ 18,171 ಕೋಟಿ ರೂ. ಪರಿಹಾರವನ್ನು ಎನ್ಡಿಆರ್ಎಫ್ ಅನ್ವಯ ಕೋರಿ ಮನವಿ ಮಾಡಿದ್ದೇವೆ. ಸೆಪ್ಟೆಂಬರ್ 23ರಂದು ಕೇಂದ್ರ ಕೃಷಿ, ಗೃಹ ಸಚಿವರ ಭೇಟಿಗೆ ಪ್ರಯತ್ನ ಕೂಡ ನಡೆಸಲಾಗಿದೆ. ಕೇಂದ್ರ ಬರ ಅಧ್ಯಯನ ತಂಡವು ರಾಜ್ಯದಲ್ಲಿ ಅಕ್ಟೋಬರ್ 4 ರಿಂದ ಅಕ್ಟೋಬರ್ 9ರ ವರೆಗೆ ರಾಜ್ಯದ 13 ಜಿಲ್ಲೆಗಳಲ್ಲಿ ಭೇಟಿ ನೀಡಿ ಬರದ ಪರಿಸ್ಥಿತಿಯನ್ನು ಅವಲೋಕಿಸಿದೆ. ಈ ತಂಡದವರಿಗೆ ನಾವು ರಾಜ್ಯದಲ್ಲಿನ ಬರ ಪರಿಸ್ಥಿತಿಯ ತೀವ್ರತೆಯನ್ನು ಮನವರಿಕೆ ಮಾಡಿದ್ದೇವೆ ಎಂದು ಸಚಿವರು ತಿಳಿಸಿದರು.

Join Whatsapp
Exit mobile version